ಶಿಕ್ಷಕರ ದಿನಾಚರಣೆ ಬಹಿಷ್ಕರಿಸಿ ವಿಧಾನಸೌಧ ಚಲೋ

ತುಮಕೂರು

       ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯಾದ್ಯಂತ ಪ್ರಾಥಮಿಕ ಶಾಲಾ ಶಿಕ್ಷಕರು ಇದೇ ತಿಂಗಳ 9ರಂದು ಜಿಲ್ಲಾ ಮಟ್ಟದಲ್ಲಿ ಬೃಹತ್ ರ್ಯಾಲಿ ನಡೆಸಿ ಸರ್ಕಾರಕ್ಕೆ ಹಕೊತ್ತಾಯ ಮಂಡಿಸಲು ತೀರ್ಮಾನಿಸಿದ್ದಾರೆ. ಜೊತೆಗೆ ಸೆಪ್ಟಂಬರ್ 5ರ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಸಾಮೂಹಿಕವಾಗಿ ಬಹಿಷ್ಕರಿಸಲು ಶಾಲಾ ಶಿಕ್ಷಕರು ನಿರ್ಧಾರ ಮಾಡಿದ್ದಾರೆ.

       ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಷಣ್ಮುಖಪ್ಪ ಹಾಗೂ ಪದಾಧಿಕಾರಿಗಳು ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ರಾಜ್ಯ ಸಂಘದ ನಿರ್ಣಯದಂತೆ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಶಾಲೆಗಳಿಗೆ ಸಾಂದರ್ಭಿಕ ರಜೆ ಹಾಕಿ ವಿವಿಧ ಹಂತದ ಹೋರಾಟ ನಡೆಸುವುದಾಗಿ ಹೇಳಿದರು.

    ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗಧಿಗೊಳಿಸಬೇಕು. ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆಯನ್ನೇ ಮುಂದುವರೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

      ಕಳೆದ ಮೂರು ವರ್ಷಗಳಿಂದ ಶಿಕ್ಷಕ ವರ್ಗಾವಣೆ ಆಗಿಲ್ಲ, ಈಗ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದೆ. ಈ ಪ್ರಕ್ರಿಯೆ ಮುಗಿದ ನಂತರ ಅಕ್ಟೋಬರ್ ತಿಂಗಳಲ್ಲಿ ಮತ್ತೊಮ್ಮೆ ಕೋರಿಕೆ ವರ್ಗಾವಣೆ ಮಾತ್ರ ನಡೆಸಬೇಕು. ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಆರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನ್ಯತೆ ಸರಿಪಡಿಸಿ, ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು. ಶಿಕ್ಷಕ, ವಿದ್ಯಾರ್ಥಿ ಅನುಪಾತ ಗುರುತಿಸುವಾಗ ಮುಖ್ಯೋಪಧ್ಯಾಯರು, ದೈಹಿಕ ಶಿಕ್ಷಕರನ್ನು ಹೊರತುಪಡಿಸಿ ಹೆಚ್ಚುವರಿ ಪ್ರಕ್ರಿಯೆ ಆರಂಭಿಸಬೇಕು ಎಂದು ಷಣ್ಮುಖಪ್ಪ ಒತ್ತಾಯಿಸಿದರು.

     ಆರನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸ್ಸಿನ ಪ್ರಕಾರ ಮುಖ್ಯ ಶಿಕ್ಷಕರುಗಳಿಗೆ ಹಿಂದಿನ ವರ್ಷಗಳ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪನಿರ್ದೇಶಕರ ಹುದ್ದೆವರೆಗೆ ಬಡ್ತಿಗಳನ್ನು ನೀಡಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕರು ಹಾಗೂ ನೌಕರರ ಸಮಸ್ಯೆಗಳನ್ನು ನಿವಾರಿಸುವಂತೆ ಆಗ್ರಹಿಸಿದರು.

     ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ಸೆಪ್ಟಂಬರ್ 5ರಂದು ಶಿಕ್ಷಕರ ದಿನಾಚರಣೆ ಬಹಿಷ್ಕರಿಸಿ, ವಿಧಾನ ಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ಜಿಲ್ಲಾ ಸಂಘದ ಉಪಾಧ್ಯಕ್ಷ ಸಿದ್ದರಾಮಣ್ಣ, ಪ್ರಧಾನ ಕಾರ್ಯದರ್ಶಿ ಪಿ ಜಿ ತಿಮ್ಮೇಗೌಡ, ಸಹ ಕಾರ್ಯದರ್ಶಿ ದಯಾನಂದ್, ಪದಾಧಿಕಾರಿಗಳಾದ ರವಿಕುಮಾರ್, ಪುಷ್ಪಲತಾ ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap