ಚಿತ್ರದುರ್ಗ 

ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವನ್ನು ಸರ್ಕಾರದ ನಿರ್ದೇಶನದಂತೆ ವಿಶ್ವ ಮಾನವ ದಿನವನ್ನಾಗಿ ಜಿಲ್ಲೆಯಲ್ಲಿ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಡಿ. 29 ರಂದು ಬೆಳಿಗ್ಗೆ 10 ಗಂಟೆಗೆ ವಿಶ್ವ ಮಾನವ ದಿನಾಚರಣೆ ಸಮಾರಂಭ ನಗರದ ತ.ರಾ.ಸು. ರಂಗಮಂದಿರದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಂಗಪ್ಪ ಅವರು ಹೇಳಿದರು.
ಜಿಲ್ಲಾ ಕೇಂದ್ರದಲ್ಲಿ ವಿಶ್ವ ಮಾನವ ದಿನಾಚರಣೆ ಆಯೋಜನೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ವಿಶ್ವ ಮಾನವ ದಿನವನ್ನಾಗಿ ಆಚರಿಸುವಂತೆ ಸರ್ಕಾರ ನಿರ್ದೇಶನ ನೀಡಿದೆ.
ನಮ್ಮ ದೇಶ ಕಂಡ ಶ್ರೇಷ್ಠ ಕವಿ, ಸಾಹಿತಿ ಕುವೆಂಪು ಅವರು ಎಲ್ಲ ಜಾತಿ, ಜನ, ಭಾಷೆಯನ್ನು ಮೀರಿ ನಿಂತವರು. ಇಂತಹ ಮಹಾನ್ ವ್ಯಕ್ತಿಯ ಸಾಧನೆಯನ್ನು ಕೇವಲ ಒಂದು ಕಾರ್ಯಕ್ರಮದ ಮೂಲಕ ಬಿಂಬಿಸಲು ಸಾಧ್ಯವಿಲ್ಲ. ಹೀಗಾಗಿ ಕುವೆಂಪು ಅವರ ಸಾಧನೆಯನ್ನು ಎಲ್ಲೆಡೆ ತಲುಪುವಂತಾಗಲು ಜಿಲ್ಲೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು
ಶಾಲಾ ಕಾಲೇಜು ಮಟ್ಟದಲ್ಲಿ ‘ಕುವೆಂಪು ಸಾಹಿತ್ಯದಲ್ಲಿ ಜೀವನ ಮೌಲ್ಯಗಳು’, ‘ಕುವೆಂಪು ಸಾಹಿತ್ಯದಲ್ಲಿ ದಲಿತ ಸಂವೇದನೆ’, ಹಾಗೂ ‘ಕುವೆಂಪು ಅವರ ಕಾವ್ಯದಲ್ಲಿ ಪ್ರಕೃತಿ ವರ್ಣನೆ’ ವಿಷಯ ಆಧಾರಿತ ಪ್ರಬಂಧ, ಭಾಷಣ, ಗೀತ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗುವುದು. ವಿಜೇತ ಮಕ್ಕಳಿಗೆ ಬಹುಮಾನದ ಜೊತೆಗೆ ಪ್ರಶಸ್ತಿ ಪತ್ರ ನೀಡಲಾಗುವುದು. ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೂ ಸ್ಪರ್ಧೆ ಏರ್ಪಡಿಸಲಾಗುವುದು. ಡಿ. 29 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತ.ರಾ.ಸು. ರಂಗಮಂದಿರದಲ್ಲಿ ವೇದಿಕೆ ಸಮಾರಂಭ ಜರುಗಲಿದ್ದು, ಕುವೆಂಪು ಅವರ ರಚಿತ ಕಾವ್ಯಗಳ ಆಧರಿಸಿದ ನೃತ್ಯ ರೂಪಕ ಹಮ್ಮಿಕೊಳ್ಳಲಾಗುವುದು ಅಲ್ಲದೆ ಕುವೆಂಪು ಅವರ ಕುರಿತ ಉಪನ್ಯಾಸ ಕಾರ್ಯಕ್ರಮ ಇರುತ್ತದೆ.
ಡಿ. 29 ರಂದು ಜರುಗುವ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಭಾಗವಹಿಸಬೇಕು. ಗೈರು ಹಾಜರಾಗುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು. ಈ ಎಲ್ಲ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಪದವಿಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳು ಸೂಕ್ತ ಸಹಯೋಗ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸಂಗಪ್ಪ ಅವರು ಹೇಳಿದರು.
ಸಭೆಯಲ್ಲಿ ಭಾಗವಹಿಸಿದ್ದ ಜಿ.ಪಂ. ಉಪಕಾರ್ಯದರ್ಶಿ ಡಾ. ರಂಗಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಬಿಸಿಎಂ ಜಿಲ್ಲಾ ಅಧಿಕಾರಿ ಅವಿನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಲೇಜುಗಳ ಪ್ರಾಚಾರ್ಯರು, ಗಣ್ಯರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ







