ಬೆಂಗಳೂರು
ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಮುನ್ನೂರಕ್ಕೂ ಹೆಚ್ಚು ಗಣ್ಯರ ಫೋನ್ ಕದ್ದಾಲಿಕೆ ಮಾಡಲಾಗಿತ್ತು ಎಂಬ ಆರೋಪ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು,ಇದರ ಬೆನ್ನಲ್ಲೇ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಹಲ ನಾಯಕರು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅದೇ ಕಾಲಕ್ಕೆ ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ಮುಖ್ಯ ಕಾರ್ಯದರ್ಶಿಗಳ ಜತೆ ಚರ್ಚಿಸಿ ಮುಂದಿನ ಹೆಜ್ಜೆ ಇಡುವುದಾಗಿ ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ.ಇದರಿಂದಾಗಿ ಫೋನ್ ಕದ್ದಾಲಿಕೆ ಪ್ರಕರಣ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು ಹಲ ರಾಜಕಾರಣಿಗಳು ,ಅಧಿಕಾರಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರ ಕರೆಗಳನ್ನು ಕದ್ದಾಲಿಸಿದ ಕುರಿತು ಅಸಮಾಧಾನ ವ್ಯಕ್ತವಾಗಿದೆ.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್,ಹಿರಿಯ ನಾಯಕ ಹೆಚ್.ವಿಶ್ವನಾಥ್ ಸೇರಿದಂತೆ ಹಲವರು,ಇಡೀ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕ,ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್:ನಮ್ಮ ದೂರವಾಣಿಗಳನ್ನು ಕದ್ದಾಲಿಸಲಾಗುತ್ತಿದೆ ಎಂಬ ಕುರಿತು ಹಿಂದೆಯೇ ನಾವು ಹೇಳಿದ್ದೆವು.ಈಗಲೂ ಹೇಳುತ್ತೇವೆ.ತಕ್ಷಣವೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು.
ಫೋನ್ ಕದ್ದಾಲಿಕೆ ಮಾಡುವುದು ಅಪರಾಧ.ನಾವೇನು ಸಮಾಜಘಾತಕ ಶಕ್ತಿಗಳಲ್ಲ.ರಾಜಕೀಯ ಲಾಭಕ್ಕಾಗಿ ಇಂತಹ ಕೆಲಸ ಮಾಡಿರುವ ಕುರಿತು ನಮಗೆ ವಿವರಗಳಿವೆ.ಹೀಗಾಗಿ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.ಹೆಚ್.ವಿಶ್ವನಾಥ್ ಅವರು ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರ ಜತೆ ಮಾತನಾಡಿ,ಕುಮಾರಸ್ವಾಮಿ ಅವರ ಕಾಲದಲ್ಲಿ ನನ್ನ ದೂರವಾಣಿ ಸೇರಿದಂತೆ ಹಲವರ ದೂರವಾಣಿ ಕರೆಗಳನ್ನು ಕದ್ದಾಲಿಸಲಾಗುತ್ತಿತ್ತು ಎಂದು ಹೇಳಿದರು.
ಈ ಅಂಶವೇ ಅವರಿಗೆ ನಮ್ಮಲ್ಲಿ ನಂಬಿಕೆ ಇಲ್ಲ ಎಂಬುದರ ಸಂಕೇತವಾಗಿತ್ತು.ಜೆಡಿಎಸ್ ರಾಜ್ಯಾಧ್ಯಕ್ಷನಾದರೂ ನನ್ನ ದೂರವಾಣಿ ಕರೆಗಳನ್ನು ಕದ್ದಾಲಿಸಲಾಗುತ್ತಿತ್ತು.ಅದೇ ರೀತಿ ನಮ್ಮ ಕುಟುಂಬದವರ ದೂರವಾಣಿ ಕರೆಗಳನ್ನೂ ಕದ್ದಾಲಿಸಲಾಗುತ್ತಿತ್ತು.ಇದು ಸರಿಯಲ್ಲ.ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣವೇ ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು.ಈ ಕೆಲಸ ಮಾಡಲು ಹೇಳಿದವರನ್ನು,ಅದನ್ನು ಪಾಲಿಸಿದ ಅಧಿಕಾರಿಗಳನ್ನು ಸುಮ್ಮನೆ ಬಿಡಬಾರದು.ಬದಲಿಗೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಈ ಹಿಂದೆ ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಗ್ಯಾನಿ ಜೈಲ್ ಸಿಂಗ್ ಅವರು ತಮ್ಮ ದೂರವಾಣಿಯನ್ನು ಕದ್ದಾಲಿಸಲಾಗುತ್ತಿದೆ ಎಂದು ಆರೋಪಿಸಿದರು.ಆಗ ವಿಷಯ ದೇಶವ್ಯಾಪಿ ಚರ್ಚೆಗೆ ಗುರಿಯಾಯಿತಲ್ಲದೆ ಸಂಸತ್ತಿನಲ್ಲೂ ಅದರ ಪ್ರತಿಧ್ವನಿಯಾಯಿತು.
ಅವತ್ತು ಪ್ರತಿಪಕ್ಷದ ಸಾಲಿನಲ್ಲಿದ್ದ ಮಧುದಂಡವತೆ ಅವರಂತವರು,ಕೇಂದ್ರ ಸರ್ಕಾರದ ಟೆಲಿಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ಆರೋಪ ಮಾಡಿದಾಗ ಟಿಡಿಪಿಯ ರೆಡ್ಡಿ ಎಂಬ ಸಂಸದರು:ಇಲ್ಲಿ ಟೆಲಿಫೋನ್ ಕದ್ದಾಲಿಕೆ ಬಗ್ಗೆ ಮಾತನಾಡುತ್ತಿದ್ದೀರಿ.ಆದರೆ ನಿಮಗೆ ಆ ಕುರಿತು ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಹೇಳಿದರು.
ಮುಂದುವರಿದು ಮಾತನಾಡಿ:ಕರ್ನಾಟಕದಲ್ಲಿ ನಿಮ್ಮವರೇ ಆದ ರಾಮಕೃಷ್ಣ ಹೆಗಡೆ ಅವರು ಐವತ್ತು ಮಂದಿಯ ಟೆಲಿಫೋನ್ ಟ್ಯಾಪಿಂಗ್ ಮಾಡಿಸಿದ್ದಾರೆ ಎಂದು ಪಟ್ಟಿ ಬಿಡುಗಡೆ ಮಾಡಿದರು.ಆಗ ಪ್ರಕರಣ ವಿಕೋಪಕ್ಕೆ ತಿರುಗಿತಲ್ಲದೆ ಕರ್ನಾಟಕದಲ್ಲೂ ಅದರ ಪ್ರತಿಧ್ವನಿಯಾಗಿ ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿ ಬಂದಿತ್ತು ಎಂದವರು ಹೇಳಿದರು.
ಈಗ ಆರೋಪ ಸಾಬೀತಾದರೂ ಕುಮಾರಸ್ವಾಮಿ ರಾಜೀನಾಮೆ ಕೊಡುವ ಜಾಗದಲ್ಲಿಲ್ಲ.ಆದರೂ ಸತ್ಯ ಬಹಿರಂಗವಾಗಬೇಕು .ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅನುಕೂಲವಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಈ ಮಧ್ಯೆ ದೂರವಾಣಿ ಕದ್ದಾಲಿಕೆ ಪ್ರಕರಣದ ಬಗ್ಗೆ ವ್ಯಾಪಕ ಚರ್ಚೆ ಶುರುವಾಗುತ್ತಿದ್ದಂತೆ ಇಂದಿಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ:ಈ ಕುರಿತು ಮುಖ್ಯಕಾರ್ಯದರ್ಶಿಗಳ ಜತೆ ಚರ್ಚಿಸಿ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








