ಡಾ.ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ : ಸಿ ಟಿ ರವಿ

ಬೆಂಗಳೂರು

   ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಭರವಸೆ ನೀಡಿದ ಹಿನ್ನಲೆಯಲ್ಲಿ ಕಳೆದ 10 ದಿನಗಳಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಕರ್ನಾಟಕ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಕೈ ಬಿಟ್ಟಿದ್ದಾರೆ.

    ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ನೇತೃತ್ವದಲ್ಲಿ ಆನಂದ್‌ರಾವ್ ವೃತ್ತದ ಮಹಾತ್ಮ ಗಾಂಧಿ ಪ್ರತಿಮೆ ಮುಂಬಾಗ ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿ ಭರವಸೆ ನೀಡಿದ್ದರಿಂದ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.

    ಕನ್ನಡ ಭಾಷೆ,ನಾಡು, ನುಡಿ ಉಳಿಯಬೇಕು.ಇದರ ಜೊತೆಗೆ ಕನ್ನಡಿಗರು ಪ್ರಗತಿ ಸಾಧಿಸಬೇಕು. ಮೀಸಲಾತಿ ಬೇಡಿಕೆ ಸಂಬಂಧ ಈಗಾಗಲೇ ಡಿ ದರ್ಜೆ ನೌಕರಿಯಲ್ಲಿ ಮೀಸಲಾತಿಯನ್ನು ಸರ್ಕಾರ ಜಾರಿಗೆ ತಂದಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಹಾಗಾಗಿ, ಹೋರಾಟ ಕೈ ಬಿಡಬೇಕು ಎಂದು ಮನವಿ ಮಾಡಿದರು.

ಮತ್ತೆ ಹೋರಾಟ

    ಒಕ್ಕೂಟದ ಅಧ್ಯಕ್ಷ ಚಳುವಳಿ ನಾಗೇಶ್ ಮಾತನಾಡಿ, ಸರ್ಕಾರ ನಮ್ಮ ಬೇಡಿಕೆಗಳಿಗೆ ಅಧಿಕೃತ ಆದೇಶ ಹೊರಡಿಸಬೇಕು. ಆಗ ಮಾತ್ರ ನಾವು ಹೋರಾಟ ಕೈಬಿಡುತ್ತೇವೆ ಎಂದು ಪಟ್ಟು ಹಿಡಿದರು.ಸರೋಜಿನಿ ಮಹಿಷಿ ವರದಿ ಹೊರಬಂದು 33 ವರ್ಷಗಳೇ ಕಳೆದರೂ ವರದಿ ಮಾಡದಿರುವುದು ಖಂಡನೀಯ. ಸರ್ಕಾರ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು.ಇಲ್ಲದಿದ್ದರೆ, ಹೋರಾಟ ಮುಂದುವರೆಸಲಾಗುವುದು ಎಂದರು.

 10ನೇ ದಿನಕ್ಕೆ:

     ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದಿಗೆ ಹತ್ತನೇ ದಿನಕ್ಕೆ ಕಾಲಿಟ್ಟಿದೆ.

     ಉದ್ಯೋಗದ ಹಕ್ಕು ಪಡೆದುಕೊಳ್ಳಲು ಕನ್ನಡಿಗರು ಹೋರಾಟ ನಡೆಸುತ್ತಿದ್ದರೂ ಸರ್ಕಾರ ಮಾತ್ರ ಜಾಣ ಕುರುಡು ಪ್ರದರ್ಶಿಸುತ್ತಿದೆ. ಸ್ವಾಭಿಮಾನ ಶೂನ್ಯ ಜನಪ್ರತಿನಿಧಿಗಳು ಹಾಗೂ ಸರ್ಕಾರದ ಅವೈಜ್ಞಾನಿಕ ನೀತಿಯಿಂದ ಕನ್ನಡಿಗರು ನಿರುದ್ಯೋಗಿಗಳಾಗಿಯೇ ಉಳಿದಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

     ನಾಡಿನಲ್ಲಿ ಸ್ಥಾಪನೆಯಾಗುವ ಕಂಪೆನಿಗಳಲ್ಲಿ ಶೇ 80ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ಮೀಸಲಿಡಬೇಕು ಎಂದು ಸರೋಜಿನಿ ಮಹಿಷಿ ನೇತೃತ್ವದ ಸಮಿತಿಯು 1983ರಲ್ಲೇ ವರದಿ ನೀಡಿದೆ. ಆದರೆ, ಯಾವುದೇ ರಾಜಕೀಯ ಪಕ್ಷಗಳು ಈ ವರದಿಯನ್ನು ಅನುಷ್ಠಾನಕ್ಕೆ ತರದೆ ಕನ್ನಡಿಗರಿಗೆ ಅನ್ಯಾಯ ಎಸಗಿವೆ ಎಂದು ದೂರಿದರು.ಈ ಸಂದರ್ಭದಲ್ಲಿ ಕನ್ನಡ ಪರ ಹೋರಾಟಗಾರರು ಪಾಲ್ಗೊಂಡು, ವರದಿ ಜಾರಿಗೆ ಆಗ್ರಹಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap