ಹುಬ್ಬಳ್ಳಿ
ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಡಾ ಜಿ.ಪರಮೇಶ್ವರ್ ಅವರ ನಿವಾಸ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದ ಐಟಿ ದಾಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ
ಕಾಂಗ್ರೆಸ್ ಪಕ್ಷದವರ ಮೇಲೆ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯದ ದಾಳಿ ನಡೆದಾಗ ರಾಜಕೀಯಕ್ಕಾಗಿ ದಾಳಿ ಎಂದು ಟೀಕೆ ಮಾಡುತ್ತಿದ್ದಾರೆ. ಈಗಾಗಲೇ ಜಿ ಪರಮೇಶ್ವರ್, ಐಟಿ ದಾಳಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಕಾನೂನು ಬದ್ಧವಾಗಿ ಎಲ್ಲವನ್ನು ಎದುರಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೂ, ಕಾಂಗ್ರೆಸ್ ಮುಖಂಡರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ , ಕೇಂದ್ರ ಗೃಹ ಸಚಿವ ಅಮಿಶ್ ಶಾ ಬಗ್ಗೆ ಅವರನ್ನು ಉಲ್ಲೇಖಿಸಿ ಕಾಂಗ್ರೆಸ್ ನವರು ಟೀಕೆ ಮಾಡುವುದು ಸರಿಯಲ್ಲ. ಪ್ರಾಮಾಣಿಕವಾಗಿ ಐಟಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದು, ಅವರ ಕೆಲಸವನ್ನು ಕಾಂಗ್ರೆಸ್ಸಿಗರು ಪ್ರಶಂಸಿಸುವುದು ಬಿಟ್ಟು, ತಮ್ಮ ತಪ್ಪನ್ನು ಮುಚ್ಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ತಪ್ಪು ಮಾಡಿಲ್ಲವೆಂದರೇ ಐಟಿ ತನಿಖೆಯನ್ನು ಎದುರಿಸಬೇಕು ಎಂದರು.
ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ. ಈ ಬೆಳವಣಿಗೆ ಪ್ರಕರಣವನ್ನು ದಾರಿ ತಪ್ಪಿಸುವ ಹುನ್ನಾರದಂತೆ ಕಾಣುತ್ತಿದೆ. ಈ ಬಗ್ಗೆ ಸರಿಯಾದ ತನಿಖೆಯಾಗಿ ನಿಜವಾದ ಸತ್ಯ ಹೊರಗೆ ಬರಲಿ. ಆದರೆ ಆತ್ಮಹತ್ಯೆಗೂ ಐಟಿಗೂ ಸಂಬಂಧವಿಲ್ಲ ಎಂದರು.
ಚಿಕ್ಕಬಳ್ಳಾಪುರದಲ್ಲಿ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಸಚಿವ ಸುರೇಶ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಐಟಿ ದಾಳಿ ರಾಜಕೀಯ ಪ್ರೇರಿತವಲ್ಲ. ಈ ಬಗ್ಗೆ ಸ್ವತಃ ಪರಮೇಶ್ವರ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಅವರಿಗೆ ಪರಮೇಶ್ವರ್ ಅವರ ಹೇಳಿಕೆಯೇ ಉತ್ತರ ಎಂದು ತಿರುಗೇಟು ನೀಡಿದರು.
ಸ್ಪೀಕರ್ ವಿಶ್ವೇಶ್ವರ ಕಾಗೇರಿ, ಆರ್ ಎಸ್ ಎಸ್ ಹೇಳಿದ ಹಾಗೆ ಕೆಲಸ ನಿರ್ವಹಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ನವರು ಹಾಗೆಯೇ ಹೇಳುತ್ತಾರೆ. ಅವರಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
