ಬೆಂಗಳೂರು
ಆಪರೇಷನ್ ಕಮಲ ಆಡಿಯೋ ಪ್ರಕರಣದಲ್ಲಿ ಸಿಲುಕಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಧ್ಯಕ್ಕೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ನಗರದ ಸಿಟಿ ಸಿವಿಲ್ ಕೋರ್ಟ್‍ನ 82ನೇ ವಿಶೇಷ ನ್ಯಾಯಾಲಯ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಫೆಬ್ರುವರಿ 13 ರಂದು ದೇವದುರ್ಗದಲ್ಲಿ ಶರಣಗೌಡ ಅವರು ರೆಕಾರ್ಡ್ ಮಾಡಿಕೊಂಡಿದ್ದ ಆಪರೇಷನ್ ಕಮಲದ ಧ್ವನಿ ಸುರುಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‍ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದರು.
ಶರಣಗೌಡ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‍ನಲ್ಲಿ ಯಡಿಯೂರಪ್ಪ ಪರ ವಕೀಲ ಸಿ.ವಿ.ನಾಗೇಶ್ ನಿನ್ನೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.ಇಂದು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಬಿ.ವಿ.ಪಾಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿ ಇತರ ನಾಲ್ವರಿಗೂ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ವೈಯಕ್ತಿಕ 1 ಲಕ್ಷ ರೂ. ಬಾಂಡ್, ಸಾಕ್ಷಿ ನಾಶ ಮಾಡಬಾರದು. ತನಿಖೆಗೆ ಸಹಕರಿಸಬೇಕು ಹಾಗೂ ಮಾಹಿತಿ ಇಲ್ಲದೆ ಬೇರೆಡೆ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ಜಾಮೀನು ಮಂಜೂರು ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ