ಬೆಂಗಳೂರು
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಲು ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳ ಹಲವು ಗ್ರಾಮಗಳು ಜಲಾವೃತವಾಗಿದ್ದು, ಈಗಾಗಲೇ ತುರ್ತು ಪರಿಹಾರ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಲು ನಾಳೆ ಬೆಳಗ್ಗೆ ಈ ಎರಡು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು. ನಿರಾಶ್ರಿತ ಕೇಂದ್ರಗಳಿಗೂ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದರು.
ಪ್ರವಾಹ ಉಂಟಾಗಿರುವ ಜಿಲ್ಲೆಗಳ ಜಿಲ್ಲಾಡಳಿತದ ಜೊತೆ ಚರ್ಚೆ ನಡೆಸಿದ್ದೇನೆ, ಮನೆ ಕಳೆದುಕೊಂಡವರಿಗೆ ಶಾಲೆಗಳಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಪ್ರವಾಹಕ್ಕೆ ಸಿಲುಕಿರುವ ಜನರ ರಕ್ಷಣೆಗೆ ಹಾಗೂ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದರಂತೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.
ನೆರೆ ಅವಲೋಕನ ನಡೆಸಿದ ಬಳಿಕ ನಾಳೆ ಸಂಜೆ ದಹೆಲಿಗೆ ಭೇಟಿ ನೀಡುತ್ತಿದ್ದು, ಅಲ್ಲಿ ಪಕ್ಷದ ಹಿರಿಯ ನಾಯಕರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ವರಿಷ್ಠರು ಸೂಚನೆ ನೀಡಿದ 24 ಗಂಟೆಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮುಖ್ಯಮಂತ್ರಿಗಳ ನವ ನಿರ್ಮಾಣ ಯೋಜನೆಯ ಅನುಷ್ಠಾನಕ್ಕೆ ತಡೆ ನೀಡಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕಲು ಸೂಚನೆ ನೀಡಿಲ್ಲ. ಆದರೆ ಯೋಜನೆ ಹೆಸರಿನಲ್ಲಿ ಬೇಕಾಬಿಟ್ಟಿ ಹಣ ಖರ್ಚು ಮಾಡಿರುವುದು ಬೆಳಕಿಗೆ ಬಂದಿದೆ. ಕೆಲವು ಕಡೆ ಅನಗತ್ಯವಾಗಿ ಹಣ ಖರ್ಚು ಮಾಡಲಾಗಿದೆ. ಆದ್ದರಿಂದ ಅನುದಾನ ತಡೆಗೆ ಸೂಚನೆ ನೀಡಿದ್ದೇನೆ ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡರು.
ಬಕ್ರೀದ್ ಹಬ್ಬಕ್ಕೆ ಅಡ್ಡಿ ಆತಂಕ ಎದುರಾಗಬಾರದು ಎಂದು ಸೂಚನೆ ನೀಡಿದ್ದೇನೆ. ಕ್ರಿಶ್ಚಿಯನ್, ಮುಸ್ಲಿಂ, ಹಿಂದೂ ಸೇರಿದಂತೆ ಯಾವುದೇ ಹಬ್ಬಗಳಿಗೂ ತೊಂದರೆಯಾಗಬಾರದು. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಟಿಪ್ಪು ಜಯಂತಿ ಸಂದರ್ಭದಲ್ಲಿ ನಡೆದ ಗಲಭೆಯ ವೇಳೆ ದಾಖಲಾಗಿದ್ದ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
