ಬೆಂಗಳೂರು
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕೈಗೊಳ್ಳಲು ವಿಧಾನಸಭಾಧ್ಯಕ್ಷರಿಗೆ ಸೂಚನೆ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.
ರಾಜಭವನದಲ್ಲಿ ರಾಜ್ಯಪಾಲ ವಜುಭಾಯಿವಾಲಾ ಅವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಭೇಟಿ ಮಾಡಿ ಕಾಂಗ್ರೆಸ್ ನಾಯಕರ ನಿಯೋಗ ಸ್ವಾತಂತ್ರ್ಯ ಹೋರಾಟಗಾರರು, ಸ್ವತಂತ್ರ ಸಂಗ್ರಾಮವನ್ನು ಅಪಮಾನಿಸಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿರುವುದು ಸಂವಿಧಾನ ವಿರೋಧಿಯಾಗಿದ್ದು ತಕ್ಷಣವೇ ಅವರ ಶಾಸಕತ್ವವನ್ನು ರದ್ದು ಮಾಡುವಂತೆ ಸಭಾಧ್ಯಕ್ಷರಿಗೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.
ಬಸನಗೌಡ ಪಾಟೀಲ್ ಅವರ ಹೇಳಿಕೆ ಸಂವಿಧಾನ ಆಶಯಗಳಿಗೆ, ಉದಾತ್ತ ಧ್ಯೇಯಗಳಿಗೆ ವಿರುದ್ಧವಾದದ್ದು, ಅವರ ಮಾತು ಸಂವಿಧಾನ ವಿರೋಧಿಯಾಗಿದೆ. ಹಾಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ವಿಧಾನಸಭಾಧ್ಯಕ್ಷರಿಗೆ ಸೂಚನೆ ನೀಡಿ ಎಂದು ಮನವಿ ಮಾಡಿದ ನಿಯೋಗ ಮನವಿಪತ್ರವನ್ನು ಸಲ್ಲಿಸಿತು.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ನಂತರ ರಾಜಭವನದವರೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದೇವೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಯತ್ನಾಳ್, ಶಾಸಕರಾಗಿ ಮುಂದುವರೆಯುವ ಅರ್ಹತೆ ಕಳೆದುಕೊಂಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದೇವೆ ಎಂದರು.
ರಾಜ್ಯಪಾಲರಿಗೆ ಸ್ಪೀಕರ್ ವಿರುದ್ಧ ನಾವು ಯಾವುದೇ ದೂರು ನೀಡಿಲ್ಲ ಎಂದು ಸ್ಪಷ್ಟಪಡಿಸಿದರು, ರಾಜ್ಯಪಾಲರನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕರ ನಿಯೋಗದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರಖಂಡ್ರೆ, ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮಾಜಿ ಸಚಿವರುಗಳಾದ ಕೆ.ಜೆ ಜಾರ್ಜ್ ಎಂ.ಬಿ ಪಾಟೀಲ್, ಎಸ್.ಕೆ ಪಾಟೀಲ್, ಮತ್ತಿತರರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
