ಬೆಂಗಳೂರು
ಸಮ್ಮಿಶ್ರ ಸರ್ಕಾರದ ಮಿತ್ರ ಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಭಿನ್ನಾಭಿಪ್ರಾಯ ತಲೆದೋರಿರುವ ವರದಿಗಳ ಮಧ್ಯೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ, ಜೆಡಿಎಸ್ “ಮೈತ್ರಿ ಧರ್ಮ” ಪಾಲನೆ ಮಾಡುತ್ತಿಲ್ಲ ಎಂದು ದೂರು ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದ ಬಂದ ತುರ್ತು ಕರೆಯ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ಮೈತ್ರಿ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ ಎಂದು ಪಕ್ಷದ ಅಧಿಕೃತ ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಬುಧವಾರ ನಡೆದ ಜೆಡಿಎಸ್ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಟೀಕಾ ಪ್ರಹಾರ ನಡೆಸಿದ್ದರು. ಮಾತ್ರವಲ್ಲ ಮೈತ್ರಿ ಸರ್ಕಾರ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಶಾಸಕರನ್ನು ನಿಯಂತ್ರಣದಲ್ಲಿಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ಎಚ್ಚರಿಕೆ ನೀಡಿದ್ದರು.
ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲಾ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ ಎಂದು ಆರೋಪಿಸಿ, ಮುಖ್ಯಮಂತ್ರಿಯವರ ವಿರುದ್ಧ ಟೀಕೆ ಮಾಡಿದ್ದ ಸಚಿವ ಎಂ.ಟಿ.ಬಿ.ನಾಗರಾಜ್, ಕಾಂಗ್ರೆಸ್ ಶಾಸಕರಾದ ಎಸ್.ಟಿ.ಸೋಮಶೇಖರ್ ಅವರ ವಿರುದ್ಧ ದೇವೇಗೌಡರು ಹರಿಹಾಯ್ದಿದ್ದರು.
“ಮುಖ್ಯಮಂತ್ರಿಯವರು ಮಾಡುತ್ತಿರುವ ಕೆಲಸಕ್ಕೆ ಅವರು ಮಸಿ ಬಳಿಯುತ್ತಿದ್ದಾರೆ” ಎಂದು ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸದೇ ದೇವೇಗೌಡ ಅವರು ಆರೋಪಿಸಿದ್ದರು.
ಕಾಂಗ್ರೆಸ್ ಶಾಸಕರನ್ನು ಕುಮಾರಸ್ವಾಮಿ ನಿರ್ಲಕ್ಷಿಸುತ್ತಿದ್ದಾರೆ ಮತ್ತು ಅವರ ಭೇಟಿಗೆ ಸಮಯಾವಕಾಶವನ್ನೂ ನೀಡುತ್ತಿಲ್ಲ ಎಂದು ಸಿದ್ದರಾಮಯ್ಯ ಸಭೆಯಲ್ಲಿ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಶಾಸಕರಿಗೆ ಮುಖ್ಯಮಂತ್ರಿಯವರ ವಿರುದ್ಧ ಗಂಭೀರ ಆರೋಪವಿದೆ. ಇದನ್ನು ಆದ್ಯತೆಯ ಮೇರೆಗೆ ಬಗೆಹರಿಸಬೇಕು ಎಂದು ಎಐಸಿಸಿ ಅಧ್ಯಕ್ಷರಿಗೆ ಸಿದ್ದರಾಮಯ್ಯ ಮನವಿ ಮಾಡಿದರು ಎಂದು ತಿಳಿದುಬಂದಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಒತ್ತಡ ಹೆಚ್ಚಾಗುತ್ತಿದೆ. ಇವೆಲ್ಲವನ್ನೂ ಸಹಿಸಿಕೊಂಡು ಹೋಗುತ್ತಿದ್ದೇನೆ. ಪಕ್ಷದ ಕಾರ್ಯಕರ್ತರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಹನೆ ವಹಿಸಬೇಕು ಎಂದು ಮನವಿ ಮಾಡಿದ್ದರು.
ನನಗೆ ನೋವಾಗಿರುವುದು ನಿಜ. ನಾನು ಹುದ್ದೆ ತೊರೆಯಲೂ ಸಿದ್ಧ ಎಂದು ಕುಮಾರಸ್ವಾಮಿ ಹೇಳಿದ್ದರು. ಇದು ಸಮ್ಮಿಶ್ರ ಸರ್ಕಾರದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿತ್ತು. ಕಾಂಗ್ರೆಸ್ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಿ, ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರದ ವಿರುದ್ಧ ಯಾರೂ ಹೇಳಿಕೆ ನೀಡಬಾರದು ಎಂದು ಕಟ್ಟಪ್ಪಣೆ ಹೊರಡಿಸಿತ್ತು. ಈ ಮಧ್ಯೆ ಸಿದ್ದರಾಮಯ್ಯ ಹೈಕಮಾಂಡ್‍ಗೆ ದೂರು ನೀಡಿರುವುದು ಕುತೂಹಲ ಕೆರಳಿಸಿದೆ.