ಬೆಂಗಳೂರು
ಮಂತ್ರಿಮಂಡಲ ಪುನಾರಚನೆ ಪ್ರಕ್ರಿಯೆಯಿಂದ ಭುಗಿಲೆದ್ದಿದ್ದ ಅಸಮಾಧಾನ ಸರಿಪಡಿಸುವ ಪ್ರಕ್ರಿಯೆಗೆ ಕಾಂಗ್ರೆಸ್ ವರಿಷ್ಠರು ಮುಂದಾಗಿದ್ದು, ಉತ್ತರ ಕರ್ನಾಟಕದ ಹಿರಿಯ ಮುಖಂಡ ಎಚ್.ಕೆ. ಪಾಟೀಲ್ ಅವರಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ.
ಈವರೆಗೆ ಡಿ.ಕೆ. ಶಿವಕುಮಾರ್ ನಿಭಾಯಿಸುತ್ತಿದ್ದ ಕೆಪಿಸಿಸಿ ಪ್ರಚಾರ ಸಮಿತಿ ಜವಾಬ್ದಾರಿ ಎಚ್.ಕೆ. ಪಾಟೀಲ್ ಅವರಿಗೆ ವಹಿಸಲಾಗಿದೆ. ಏಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎನ್ನುವ ಸಂಪ್ರದಾಯ ಪಾಲಿಸಿರುವ ವರಿಷ್ಠರು ಎಚ್.ಕೆ. ಪಾಟೀಲ್ ಅವರಿಗೆ ಪಕ್ಷ ಸಂಘಟನೆ ಜವಾಬ್ದಾರಿ ನೀಡಿದ್ದಾರೆ. ಈವರೆಗೆ ಸಚಿವರಾಗಿ ಹಲವಾರು ಇಲಾಖೆಗಳನ್ನು ನಿಭಾಯಿಸಿರುವ ಎಚ್.ಕೆ. ಪಾಟೀಲ್, ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅದರಲ್ಲೂ ಪ್ರಮುಖವಾಗಿ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ, ಸಂವಿಧಾನ 371 ಜೆ ಅನುಷ್ಠಾನದಲ್ಲೂ ಅವರು ಸಕ್ರಿಯವಾಗಿ ತೊಡಗಿಕೊಂಡಿದ್ದರು.
ನೀರಾವರಿ ತಜ್ಞರಾಗಿ, ರಾಜ್ಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಅವರ ಕೊಡುಗೆ ಪ್ರಮುಖವಾದದ್ದು. ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ವಹಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ವರಿಷ್ಠರು ಸೂಚಿಸಿದ್ದಾರೆ.