ಬೆಂಗಳೂರುsidd
ದಪ್ಪ ಚರ್ಮದ ಕೇಂದ್ರ, ರಾಜ್ಯ ಸರಕಾರಕ್ಕೆ ಬಿಸಿ ಮುಟ್ಟಿಸಲು ಪಕ್ಷದ ವತಿಯಿಂದ ತೀವ್ರ ಸ್ವರೂಪದ ಹೋರಾಟ ಕೈಗೆತ್ತಿಕೊಳ್ಳುವುದು ಅನಿವಾರ್ಯ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಪಕ್ಷದ ಹಿರಿಯ ಮುಖಂಡರ ಸಭೆಯಲ್ಲಿ ಸಿದ್ದರಾಮಯ್ಯ ಮಾತನಾಡಿದರು.
ಪೆಟ್ರೋಲ್, ಡೀಸೆಲ್ ಅತ್ಯಂತ ದುಬಾರಿಯಾಗಿದೆ. ಬೆಲೆ ಏರಿಕೆಯನ್ನು ಖಂಡಿಸುವುದರ ಜೊತೆಗೆ ಜನಪರ ಹೋರಾಟ ಕೈಗೆತ್ತಿಕೊಳ್ಳಬೇಕು. ಕಳೆದ ಆರು ವರ್ಷಗಳಲ್ಲಿ ದರ ಏರಿಕೆ ಮತ್ತು ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆ ಮೂಲಕ ಕೇಂದ್ರ ಸರ್ಕಾರ ಸುಮಾರು 18 ಲಕ್ಷ ಕೋಟಿ ಸಂಗ್ರಹ ಮಾಡಿರುವ ಮಾಹಿತಿ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿರುವುದರಿಂದ ಪೆಟ್ರೋಲ್, ಡೀಸೆಲ್ 25 ರೂ. ಆಸುಪಾಸಿನಲ್ಲಿ ಮಾರಾಟವಾಗಬೇಕಿತ್ತು ಎಂದರು.
ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಪರಿಸ್ಥಿತಿ ನಿರ್ವಹಣೆಗೆ ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡದೆ ಜನರಿಗೆ ಎರಡೂ ಸರಕಾರಗಳು ದ್ರೋಹ ಮಾಡಿವೆ. ದೇಶದ ಹಣಕಾಸು ಪರಿಸ್ಥಿತಿ ಮೊದಲೇ ಚೆನ್ನಾಗಿರಲಿಲ್ಲ. ಇದೀಗ ಸರಕಾರದ ವೈಫಲ್ಯದ ಪರಿಣಾಮ ಆರ್ಥಿಕ ಸ್ಥಿತಿಗೆ ಪಾರ್ಶ್ವವಾಯು ಬಡಿದಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು.
ಲಾಕ್ಡೌನ್ ತೆಗೆದ ಬಳಿಕ ಕೊರೊನಾ ಸೋಂಕು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಆದರೆ, ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯರು, ಸಿಬ್ಬಂದಿಗೆ ಸೌಲಭ್ಯಗಳೇ ಇಲ್ಲ. ರೈತರು ಮತ್ತಿತರ ಸಮುದಾಯಗಳಿಗೆ ಸರಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಈವರೆಗೆ ತಲುಪಿಲ್ಲ. ಲಾಕ್ಡೌನ್ ಸಮಯದಲ್ಲೇ ಜನರ ಕೈಗೆ ಹಣ ಕೊಟ್ಟಿದ್ದರೆ ಅವರಿಗೆ ಈಗ ಕಷ್ಟ ಬರುತ್ತಿರಲಿಲ್ಲ ಎಂದರು.
ಕೊರೊನಾ ವಿಚಾರದಲ್ಲಿ ದೇಶದ ಸ್ಥಿತಿ ಕೆಟ್ಟದಾಗಿದೆ. ಮುಂದೆ ನಾವು ಅಮೆರಿಕ ಮೀರಿಸುವ ಪರಿಸ್ಥಿತಿ ಇದೆ. ಜಿಡಿಪಿಯಲ್ಲಿ ಶೇ.1ರಷ್ಟನ್ನೂ ಸರಕಾರ ಸೋಂಕು ನಿಯಂತ್ರಣಕ್ಕೆ ಖರ್ಚು ಮಾಡಿಲ್ಲ. ಎಪಿಎಂಸಿ ರಾಜ್ಯದ ಪಟ್ಟಿಯಲ್ಲಿ ಬರುವ ವಿಷಯ. ಆದರೂ ಕೇಂದ್ರ ಸರಕಾರ ಮೂಗು ತೂರಿಸುತ್ತಿದೆ. ರಾಜ್ಯ ಸರಕಾರ ಕೇಂದ್ರದ ಗುಲಾಮನಂತೆ ವರ್ತಿಸುತ್ತಿದೆ. ತಿದ್ದುಪಡಿ ಆರಂಭದಲ್ಲಿ ಚೆನ್ನಾಗಿ ಕಂಡರೂ ಮುಂದಿನ ದಿನಗಳಲ್ಲಿ ರೈತರು ಬೀದಿ ಪಾಲಾಗುತ್ತಾರೆ. ಭೂ ಸುಧಾರಣೆ ಕಾಯಿದೆಗೂ ತಿದ್ದುಪಡಿ ತರಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಉಳುವವನಿಗೇ ಭೂಮಿ ಕೊಡಬೇಕು. ಬಡವರಿಗೆ ಭೂಮಿ ಹಂಚಬೇಕು ಎಂಬುದು ಕಾಂಗ್ರೆಸ್ ಪಕ್ಷದ ನಿಲುವು. ಇದನ್ನೇ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದರು. ಉದ್ದೇಶಿತ ತಿದ್ದುಪಡಿ ಪ್ರಕಾರ ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಬಹುದು. ನಾವು ಉಳ್ಳವರಿಗೆ ಭೂಮಿ ಕೊಟ್ಟರೆ, ಸರ್ಕಾರ ಉಳ್ಳವರಿಗೆ ಕೃಷಿ ಭೂಮಿ ಧಾರೆ ಎರೆಯಲು ಮುಂದಾಗಿದೆ. ಇದರ ವಿರುದ್ಧವೂ ತೀವ್ರ ಸ್ವರೂಪದ ಹೋರಾಟ ಅನಿವಾರ್ಯ ಎಂದು ಹೇಳಿದರು.
ಕೇಂದ್ರ, ರಾಜ್ಯ ಸರಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಜೈಲ್ ಭರೋ ಸೇರಿದಂತೆ ನಾನಾ ರೀತಿಯ ಹೋರಾಟಗಳನ್ನು ರೂಪಿಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಕರೆ ನೀಡಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ