ಬೆಂಗಳೂರು
ಕೋವಿಡ್ ಹೆಸರಿನಲ್ಲಿ ಖಾಸಗಿ ನರ್ಸಿಂಗ್ ಹೋಂಗಳು ದಂಧೆ ಮಾಡಲು ಸರ್ಕಾರ ಬಿಡುವುದಿಲ್ಲ. ಖಾಸಗಿ ಆಸ್ಪತ್ರೆಗಳ ವಿರುದ್ಧ ಸಣ್ಣ ದೂರು ಬಂದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದದ ಆವರಣದಲ್ಲಿ ದಿ. ದೇವರಾಜ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ಹಣ ವಿಚಾರ ತಮ್ಮ ಗಮನಕ್ಕೆ ಬಂದಿದೆ. ನಮ್ಮ ಸರ್ಕಾರಿ ಆಸ್ಪತ್ರೆಗಳೆ ಖಾಲಿ ಇವೆ, ಅವುಗಳು ತುಂಬಿದರೆ ಸರ್ಕಾರಿ ವೈದ್ಯಕೀಯ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ಕೆಲವರು ತಮಗೆ ಗೊತ್ತಾಗದೇ ಖಾಸಗಿ ಆಸ್ಪತ್ರೆಗೆ ಹೋಗುತ್ತಿದ್ದಾರೆ. ಹೀಗಾಗಿ ಎಷ್ಟು ಶುಲ್ಕ ತೆಗೆದುಕೊಳ್ಳಬೇಕು ಎನ್ನುವುದರ ಬಗ್ಗೆ ಎರಡ್ಮೂರು ದಿನದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೋರ್ ಕಮಿಟಿ ಸದಸ್ಯರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಇಬ್ಬರನ್ನು ಆಯ್ಕೆ ಮಾಡುವ ಸಂಬಂಧ ಈ ಹೊತ್ತು ಸಂಜೆ ತೀರ್ಮಾನ ಮಾಡಲಾಗುತ್ತದೆ. ಹಲವರು ಆಕಾಂಕ್ಷಿಗಳಿದ್ದಾರೆ, ಆದರೆ ಇಬ್ಬರನ್ನು ಆಯ್ಕೆ ಮಾಡಲಾಗುತ್ತದೆ. ಉಳಿದವರಿಗೆ ಬೇರೆಯ ಅವಕಾಶ ಕಲ್ಪಿಸಲಾಗುತ್ತದೆ ಎಂದರು.
ಟಿಕೆಟ್ ಸಿಗದ ಅಸಮಾಧಾನಿತರನ್ನು ಸಮಾಧಾನಪಡಿಸುವ ಕೆಲಸವನ್ನು ನಾಯಕರು ಮಾಡುತ್ತಾರೆ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದು ಬಿ.ಶ್ರೀರಾಮುಲು ಹೇಳಿದರು.ರಾಜ್ಯಸಭೆಗೆ ದೇವೇಗೌಡರು ಸ್ಪರ್ಧೆ ಮಾಡಿದರೆ ಬಿಜೆಪಿ ಬೆಂಬಲ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಅದನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದಷ್ಟೇ ಹೇಳಿ ತಪ್ಪಿಸಿಕೊಂಡರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ