ಬೆಂಗಳೂರು
ರಾಜ್ಯ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿಸಲು ಬಿಜೆಪಿ ಯಾವುದೇ ಪ್ರಯತ್ನ ನಡೆಸುತ್ತಿಲ್ಲ. ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಅಪರೇಷನ್ ಕಮಲ ನಡೆಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ವತಃ ಬಿಜೆಪಿ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ಪ್ರತಿ ಆರೋಪ ಮಾಡಿದ್ದಾರೆ.
ರಾಜ್ಯ ಬಿಜೆಪಿ ನಾಯಕರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಬಂಡಾಯ ಅರಂಭಗೊಂಡಿರುವುದು ಇಡೀ ಜಗತ್ತಿಗೆ ಗೊತ್ತು. ಹಾಗಾಗಿ ಈಗ ನಮ್ಮ ಲಕ್ಷ್ಯವೇನಿದ್ದರೂ ಬಿಜೆಪಿ ಶಾಸಕರು ಒಗ್ಗಟ್ಟಿನಿಂದ ಇರುವಂತೆ ನೋಡಿಕೊಳ್ಳುವುದಾಗಿದೆ ಎಂದು ಹೇಳಿದ್ದಾರೆ.
ನಾವು ಯಾವುದೇ ಪಕ್ಷವನ್ನು ವಿಭಜಿಸಲು ಪ್ರಯತ್ನಿಸುವುದಿಲ್ಲ.. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೇ ಖುದ್ದು ಬಿಜೆಪಿ ಶಾಸಕರಿಗೆ ಸಚಿವ ಸ್ಥಾನ ಸೇರಿದಂತೆ ಹಲವು ಆಮಿಷ ಒಡ್ಡುತ್ತಿದ್ದಾರೆ ಎಂದು ಯಡಿಯೂರಪ್ಪ ದೂರಿದ್ದಾರೆ.
ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿದ್ದ ರಾಜ್ಯ ಬಿಜೆಪಿ ಶಾಸಕರು ಈಗ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ರಾಜ್ಯಕ್ಕೆ ಹಿಂತಿರುಗಬೇಕಿದೆ.
ರಾಜ್ಯದಲ್ಲಿ ನಡೆದಿರುವ ಕ್ಷಿಪ್ರಗತಿಯ ರಾಜಕೀಯ ಬೆಳವಣಿಗೆಯಲ್ಲಿ, ಕಾಂಗ್ರೆಸ್ ನಾಯಕ, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ದೂರಿದ್ದರು. ಕಾಂಗ್ರೆಸ್ ಪಕ್ಷವನ್ನು ಒಡೆಯುವ ಬಿಜೆಪಿಯ ಯಾವುದೇ ಪ್ರಯತ್ನ ವಿಫಲವಾಗಲಿದ್ದು, ಪಕ್ಷ ಒಗ್ಗಟ್ಟಿನಿಂದಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಬೆಂಗಳೂರಿನಲ್ಲಿ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
