ಬೆಂಗಳೂರು:
ಗ್ರಾಮ ಪಂಚಾಯತಿಗಳು ಆರ್ಥಿಕವಾಗಿ ಸದೃಢವಾಗಲು ತಾವೇ ಸ್ವತಃ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗಳಲ್ಲಿ ತೆರಿಗೆ ಸಂಗ್ರಹಿಸುವ ಬಿಲ್ ಕಲೆಕ್ಟರ್‍ಗಳು ಸರಿಯಾಗಿ ಕರ್ತವ್ಯ ನಿರ್ವಹಿಸಬೇಕು. ಇದರಲ್ಲಿ ವಿಫಲವಾದರೆ, ಮುಂದಿನ ದಿನಗಳಲ್ಲಿ ಅವರು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಅವರು ಸ್ಯಾಟಿಕಾಂ ಮೂಲಕ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ಸಂದರ್ಭದಲ್ಲಿ ಈ ಎಚ್ಚರಿಕೆ ನೀಡಿದ್ದಾರೆ. ಇದನ್ನು ಮಹಾತ್ಮಗಾಂಧೀ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಬೆಂಗಳೂರಿನ ಜಕ್ಕೂರಿನಲ್ಲಿ ಆಯೋಜಿಸಲಾಗಿತ್ತು. ಗ್ರಾಮ ಪಂಚಾಯತಿಗಳು ಸ್ಥಳೀಯ ಸರ್ಕಾರಗಳಾಗಿದ್ದು, ಸ್ವತಃ ಆಡಳಿತ ನಡೆಸುವುದನ್ನು ರೂಢಿಸಿಕೊಳ್ಳಬೇಕು, ತಮ್ಮ ವ್ಯಾಪ್ತಿಗೆ ಬರುವ ವಿವಿಧ ಬಗೆಯ ತೆರಿಗೆಗಳಿಂದ ಸಂಪನ್ಮೂಲವನ್ನು ರೂಢಿಸಿಕೊಂಡು ಶಕ್ತವಾಗಬೇಕು ಎಂದವರು ಕಿವಿ ಮಾತು ಹೇಳಿದರು.
ರಾಜ್ಯಾದ್ಯಂತ ನಡೆಯುತ್ತಿರುವ ಬೆಳೆ ಸಮೀಕ್ಷೆಗೆ ಸ್ಥಳೀಯ ಯುವಕರನ್ನು ಬಳಸಿಕೊಳ್ಳಲಾಗುತ್ತಿದೆ. ರೈತರು ಅವರಿಗೆ ಸಹಕಾರ ನೀಡಬೇಕು. ಕರಾರುವಕ್ಕಾದ ಮಾಹಿತಿಯನ್ನು ನೀಡುವುದರಿಂದ ವಿವಿಧ ಇಲಾಖೆಗಳಿಂದ ಪಡೆಯುವ ಸೌಲಭ್ಯವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ ಹಾಗೂ ಬೆಳೆ ಹಾನಿ ಮತ್ತು ಇತರೆ ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ನಷ್ಟ ಪರಿಹಾರ ಪಡೆಯಲು ನೆರವಾಗುತ್ತದೆ ಎಂದವರು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು ರೇಷ್ಮೇ ಹುಳು ಸಾಕಾಣಿಕೆ, ಮನೆ ಕಟ್ಟಲು ಉದ್ಯೋಗ ಖಾತ್ರಿ ಯೋಜನೆಯಡಿ ನೆರವು ನೀಡಲು ಅಗತ್ಯ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದೇವೆ. ಅದಕ್ಕೆ ಒಪ್ಪಿಗೆ ದೊರೆತಲ್ಲಿ ಇನ್ನು ಮುಂದೆ ರೇಷ್ಮೆ ಹುಳು ಸಾಕಾಣಿಕೆ ಮನೆ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ಅನುದಾನ ನೀಡಲಾಗುವುದು ಎಂದರು.
ನರೇಗಾ ಯೋಜನೆಯಲ್ಲಿ ಹೆಚ್ಚಾಗಿ ಶಾಲೆಗಳ ಶೌಚಾಲಯ, ಕಾಂಪೌಂಡ್ ನಿರ್ಮಾಣ, ಶಾಲಾ ಆಟದ ಮೈದಾನ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ಹಾಗೆಯೇ ಅಂಗನವಾಡಿ ಕಟ್ಟಡ ನಿರ್ಮಾಣ ಮತ್ತು ಅಂಗನವಾಡಿಗಳಲ್ಲಿ ಶೌಚಾಲಯಗಳ ನಿರ್ಮಾಣ ಸಹ ಕೈಗೊಳ್ಳಲು ಅವಕಾಶವಿದೆ. ಇದನ್ನು ಹೆಚ್ಚಾಗಿ ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ತೋಟಗಾರಿಕಾ ಬೆಳೆಯಲು ಸಹ ನರೇಗಾ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ. ದನದ ಕೊಟ್ಟಿಗೆ, ಕುರಿ ಸಾಕಾಣಿಕೆ ಶೆಡ್ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ