ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ಕರ್ನಾಟಕದ 7 ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು

   ಕರ್ನಾಟಕದಾದ್ಯಂತ ಲೋಕಾಯಯಕ್ತ ಅಧಿಕಾರಿಗಳು ಮತ್ತೆ ಭ್ರಷ್ಟರ ಬೇಟೆ ಚುರುಕುಗೊಳಿಸಿದ್ದಾರೆ. ಗುರುವಾರ ಬೆಳ್ಳಂಬೆಳಗ್ಗೆಯೇ ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಎಂಸಿ ಕೃಷ್ಣವೇಣಿ ಮನೆ ಮೇಲೆ ದಾಳಿ ನಡೆದಿದೆ. ಸದ್ಯ ಕೃಷ್ಣವೇಣಿ ಮಂಗಳೂರಿಗೆ ವರ್ಗವಾಗಿದ್ದು, ಅಲ್ಲಿಯೂ ಅವರ ಮನೆ ಮೇಲೆ ದಾಳಿ ನಡೆದಿದೆ. ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆದಿದೆ.

   ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಅವರ ಮಂಗಳೂರಿನ ವೆಲೆನ್ಸಿಯಾದ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೃಷ್ಣವೇಣಿ 2 ತಿಂಗಳ ಹಿಂದಷ್ಟೇ ವರ್ಗಾವಣೆ ಆಗಿ ಮಂಗಳೂರಿಗೆ ಬಂದಿದ್ದಾರೆ. ಇವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ‌ ಇಲಾಖೆ ಅಧಿಕಾರಿಯಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ಕೃಷ್ಣವೇಣಿ ವಿರುದ್ಧ ದೂರು ದಾಖಲಾದ ಹಿನ್ನೆಲೆ ಈ ದಾಳಿ ನಡೆದಿದೆ.
   ಮಂಗಳೂರಿನ ವೇಲೆನ್ಸಿಯಾ ಬಳಿಯ ಫ್ರೆಡ್ ರೋಸ್ ಎನ್ಕಲೇವ್ ಅಪಾರ್ಟ್​ಮೆಂಟ್​ಗೆ ಬೆಳಗ್ಗೆಯೇ ಮೂರು ವಾಹನಗಳಲ್ಲಿ ಆಗಮಿಸಿದ ಲೋಕಾ ಅಧಿಕಾರಿಗಳು ದಾಳಿ ನಡೆಸಿದರು. ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ಮಲ್ಲಿಕಟ್ಟೆ ಬಳಿಯ ಕಚೇರಿಗೂ ಲೋಕಾಯುಕ್ತ ಎಂಟ್ರಿಕೊಟ್ಟಿದೆ.ಮಂಡ್ಯದಲ್ಲಿ ‌ಲೋಕಾಯುಕ್ತ ಎಸ್​ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆಗಳ ಮೇಲೆ ದಾಳಿ ಮಾಡಲಾಗಿದೆ.
   ಒಟ್ಟು ಏಳು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಹೇಶ್ ಅವರ ಬೆಂಗಳೂರು ಮೈಸೂರು ಮನೆಗಳು, ಅವರ ಮಾವ ಕೃಷ್ಣಪ್ಪ ಅವರ ಮನೆ (ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡಿಗಳ್ಳಿ ಗ್ರಾಮದಲ್ಲಿ ಇರುವ ಮನೆ) ಸೇರಿದಂತೆ ಏಳು‌ ಕಡೆ ದಾಳಿ ನಡೆದಿದೆ.

Recent Articles

spot_img

Related Stories

Share via
Copy link
Powered by Social Snap