ಬೆಂಗಳೂರು :
ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಜಗದೀಶ್ ಅಲಿಯಾಸ್ ಜಗ್ಗ ದುಬೈಗೆ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದ್ದು, ಈತನ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ನಡುವೆ, ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಮಾಜಿ ಸಚಿವ, ಶಾಸಕ ಬೈರತಿ ಬಸವರಾಜ್ ಇಂದು 2ನೇ ಬಾರಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಬಿಕ್ಲು ಶಿವ ಕೊಲೆಯಾಗಿ ಇಂದಿಗೆ ಹತ್ತು ದಿನ ಕಳೆದಿದೆ. ಕೊಲೆ ಪ್ರಕರಣದಲ್ಲಿ ಇಲ್ಲಿತನಕ ಹನ್ನೊಂದು ಜನ ಆರೋಪಿಗಳ ಬಂಧನವಾಗಿದೆ. ಆದರೆ ಎ1 ಆರೋಪಿಯಾಗಿರುವ ಜಗ್ಗ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ. ಆತ ಕೊಲೆಯ ಬಳಿಕ ಚೆನ್ನೈಗೆ ತೆರಳಿ ಅಲ್ಲಿಂದ ದುಬೈಗೆ ಪರಾರಿಯಾಗಿದ್ದಾನೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿದಂತೆ ಹಲವು ಕಡೆಗಳಲ್ಲಿ ಜಗದೀಶ್ ಅಲಿಯಾಸ್ ಜಗ್ಗನ ಹುಡುಕಾಟಕ್ಕೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಇದೇ ವೇಳೆ ಆರೋಪಿ ಜಗ್ಗ ವಿದೇಶಕ್ಕೆ ಎಸ್ಕೇಪ್ ಆಗುವ ಬಗ್ಗೆ ಮಾಹಿತಿಗಳು ಸಿಕ್ಕ ಹಿನ್ನೆಲೆಯಲ್ಲಿ ಬುಧವಾರ ಆತನ ಪತ್ತೆಗಾಗಿ ಲುಕ್‌ಔಟ್ ನೋಟಿಸ್ ಜಾರಿ ಮಾಡಲು ತೀರ್ಮಾನಿಸಿದ್ದಾರೆ.
ಈ ನಡುವೆ ಬೈರತಿ ಬಸವರಾಜ್ ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಶುಕ್ರವಾರವೇ (ಜು.18) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಶನಿವಾರ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ಇಂದಿಗೆ ಮುಂದೂಡಿಕೆ ಮಾಡಿತ್ತು. ಆರೋಪಿಗಳ ವಿಚಾರಣೆಯಲ್ಲಿ ಸಿಕ್ಕ ಮಾಹಿತಿ ಆಧಾರದ ಮೇಲೆ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ನಡುವೆ ಜಗದೀಶ್ ಪತ್ತೆಯಾಗದ ಹಿನ್ನೆಲೆ ಇಂದು ಬೈರತಿ ಬಸವರಾಜ್ ರನ್ನು ಬಂಧಿಸುವ ಸಾಧ್ಯತೆ ಇಲ್ಲ ಎನ್ನಲಾಗಿದೆ.
