ಬೆಂಗಳೂರು:
ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ.
‘ಮಹಿಳೆಯೊಬ್ಬಳು ಕೇವಲ ಕಲ್ಪನೆಯಿಂದ ಇಂತಹ ಆರೋಪವನ್ನು ಮಾಡಲು ಸಾಧ್ಯವೇ? ಸಿಟಿ ರವಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದರೆ ಈ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವುದೇ ಮಹಿಳೆ ಕೇವಲ ಕಲ್ಪನೆಯ ಆಧಾರದ ಮೇಲೆ ಇಂತಹ ಆರೋಪಗಳನ್ನು ಮಾಡಲು ಸಾಧ್ಯವಿಲ್ಲ. ಅವರು (ಬಿಜೆಪಿ) ಈ ದೇಶದ ಸಂಸ್ಕೃತಿಯ ಬಗ್ಗೆ ಆಗ್ಗಾಗ್ಗೆ ಉಪನ್ಯಾಸ ನೀಡುತ್ತಾರೆ. ಆದರೆ, ಇದು ಅವರ ಸಂಸ್ಕೃತಿಯೇ? ಈ ರೀತಿಯ ಅವಹೇಳನಕಾರಿ ಭಾಷೆಯನ್ನು ಬಳಸುವುದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ’ ಎಂದಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಡುತ್ತಿರುವ ಆರೋಪಗಳು ಪಿತೂರಿಯ ಭಾಗವಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗಳನ್ನು ತಳ್ಳಿಹಾಕಿದ ಎಂಬಿ ಪಾಟೀಲ್, ಸಮಸ್ಯೆಯನ್ನು ಹತ್ತಿಕ್ಕಲು ಪೊಲೀಸರು ಸಿಟಿ ರವಿಗೆ ನಕಲಿ ಎನ್‌ಕೌಂಟರ್ ಮಾಡುವ ಬೆದರಿಕೆ ಹಾಕಿದ್ದಾರೆ ಎನ್ನುವ ಬಿಜೆಪಿಯ ಪ್ರತ್ಯಾರೋಪವನ್ನು ಟೀಕಿಸಿದರು. ಸಿಟಿ ರವಿ ಅವರು ಬಹಿರಂಗ ಕ್ಷಮೆಯಾಚಿಸಿದರೆ ಎಲ್ಲವೂ ಬಗೆಹರಿಯಲಿದೆ ಎಂದು ಹೇಳಿದರು.
ಸಿಟಿ ರವಿ ವಿರುದ್ಧ ಪೊಲೀಸರ ದೌರ್ಜನ್ಯದ ಆರೋಪಗಳನ್ನು ಪ್ರಸ್ತಾಪಿಸಿದ ಪಾಟೀಲ್, ಗೃಹ ಸಚಿವ ಜಿ ಪರಮೇಶ್ವರ ಅವರು ಈ ಬಗ್ಗೆ ಅಧಿಕೃತ ಹೇಳಿಕೆ ನೀಡಲಿದ್ದಾರೆ ಎಂದು ಹೇಳಿದರು.