ಮಂಡ್ಯ:
ಗಣೇಶನ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣ ಖಂಡಿಸಿ ಮದ್ದೂರಿನಲ್ಲಿ ಸೋಮವಾರ ಹಿಂದೂಪರ ಸಂಘಟನೆಗಳು, ಬಿಜೆಪಿ, ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದರಿಂದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದರ ವಿರುದ್ಧ ಆಕ್ರೋಶ ಹೊರಹಾಕಿರುವ ಹಿಂದೂಪರ ಸಂಘಟನೆಗಳ ಮುಖಂಡರು ನಾಳೆ ಮದ್ದೂರು ಬಂದ್‌ಗೆ ಕರೆ ನೀಡಿದ್ದಾರೆ.
ಇಂದು ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಮದ್ದೂರು ತಾಲೂಕು ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಗುಂಪು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದ ಹಲವರು ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ವಿಪಕ್ಷಗಳ ನಾಯಕರು, ಪರಿಸ್ಥಿತಿ ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಇನ್ನು ಮದ್ದೂರು ಕಲ್ಲು ತೂರಾಟ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ‘ ಮದ್ದೂರಿನಲ್ಲಿ ಪರಿಸ್ಥಿತಿ ಕೈಮೀರದಂತೆ ನಿಗಾ ವಹಿಸಿ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬೇಡಿ. ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಪ್ರಕರಣದಲ್ಲಿ ರಾಜಕೀಯ ಥಳುಕು ಹಾಕಿಕೊಳ್ಳುವ ಸಾಧ್ಯತೆ ಇದೆ. ಯಾವುದೇ ಕಾರಣಕ್ಕೆ ಇದಕ್ಕೆ ಅವಕಾಶ ನೀಡಬೇಡಿ ಎಂದು ಕಟ್ಟು ನಿಟ್ಟು ಸೂಚನೆ ನೀಡಿದ್ದಾರೆ.








