ಬೆಂಗಳೂರು:
ಮಳೆಯ ಅಬ್ಬರ, ಸೇತುವೆಗಳು ಜಲಾವೃತ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ಹಲವು ಜಿಲ್ಲೆಗಳಲ್ಲಿ ಗುಡ್ಡ ಕುಸಿತ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಮಳೆ ಅಬ್ಬರಿಸುತ್ತಿದೆ. ಜುಲೈ 30ರ ತನಕ ಮಳೆ ಮುಂದುವರೆಯಲಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಭಾರತೀಯ ಹವಾಮಾನ ಇಲಾಖೆ ಮಾಹಿತಿ ಆಧರಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(ಕೆಎಸ್‌ಎನ್‌ಎಂಡಿಸಿ) ರಾಜ್ಯದ ಹವಾಮಾನ ಮುನ್ಸೂಚನೆ ನೀಡಿದೆ. ಸೋಮವಾರ ರಾಜ್ಯದ ಕರಾವಳಿ, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದೆ.
ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದೆ. ಆಗಾಗ ತುಂತುರು ಮಳೆಯಾಗುತ್ತಿದೆ.ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಆದ್ದರಿಂದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಜಿಲ್ಲೆಗಳ ನದಿಗಳು, ಉಪನದಿಗಳಲ್ಲಿ ನೀರಿನ ಹರಿವು ಹೆಚ್ಚಲಿದ್ದು, ಜನರ ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಲಾಗಿದೆ.
ಮುಂದಿನ 7 ದಿನಗಳ ಕಾಲ ಕರಾವಳಿ,ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರೀ ಮಳೆಯಾಗಲಿದೆ. ಜುಲೈ 29ನಂತರ ಮಳೆ ಚಟುವಟಿಕೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ಕೊಡಲಾಗಿದೆ.
ಮಲೆನಾಡು ಭಾಗದಲ್ಲಿನ ಮಳೆಯ ಆರ್ಭಟಕ್ಕೆ ತುಂಗ, ಭದ್ರಾ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ತುಂಗಭದ್ರಾ ನದಿಯಲ್ಲಿ 1.12 ಲಕ್ಷ ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಅಪಾಯದ ಮಟ್ಟದಲ್ಲಿ ನದಿಯ ನೀರು ಇರುವುದರಿಂದ ನದಿಪಾತ್ರದಲ್ಲಿನ ಜನರು ಎಚ್ಚರಿಕೆಯಿಂದರ ಇರಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧಸ್ವಾಮಿ ಸೂಚನೆ ನೀಡಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ 1,12,170 ಕ್ಯೂಸೆಕ್ ನೀರು ಹರಿಯುತ್ತಿದೆ. ನದಿಯು ಅಪಾಯ ಮಟ್ಟದಲ್ಲಿ ಹರಿಯುತ್ತಿರುವುದರಿಂದ ಜನರಿಗೆ ಎಚ್ಚರಿಕೆ ಕೊಡಲಾಗಿದೆ.ತುಂಗಾ ಜಲಾಶಯದಿಂದ 68,599 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಮತ್ತು ಭದ್ರಾ ಜಲಾಶಯ ಭರ್ತಿಯಾಗುವ ಹಂತದಲ್ಲಿದ್ದು, 39,017 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿರುತ್ತದೆ. ಇದರಿಂದಾಗಿ ಹೊನ್ನಾಳಿ, ನ್ಯಾಮತಿ ಹಾಗೂ ಹರಿಹರ ತಾಲ್ಲೂಕುಗಳ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುತ್ತದೆ.
ಮುಂಜಾಗ್ರತಾ ಕ್ರಮವಾಗಿ ಹೊನ್ನಾಳಿ ಪಟ್ಟಣದ ನದಿ ತೀರದ ಬಾಲರಾಜ್‍ಘಾಟ್ ಪ್ರದೇಶದ ಬಳಿ ಅಂಬೇಡ್ಕರ್ ಭವನದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, 8 ಕುಟುಂಬದ 33 ಜನರನ್ನು ಸ್ಥಳಾಂತರ ಮಾಡಿ ಸಂತ್ರಸ್ತರಿಗೆ ಅಗತ್ಯ ಮೂಲ ಸೌಕರ್ಯ ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗಿದೆ.
ಹರಿಹರ ಪಟ್ಟಣದ ಗಂಗಾನಗರ ಬಳಿ ಎಪಿಎಂಸಿ ಭವನದಲ್ಲಿ ಹಾಗೂ ನ್ಯಾಮತಿ ತಾಲ್ಲೂಕು ಚೀಲೂರು ಗ್ರಾಮದಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿರುತ್ತದೆ. ಸುರಕ್ಷತಾ ದೃಷ್ಟಿಯಿಂದ ಜನ ಹಾಗೂ ಜಾನುವಾರುಗಳು ನದಿಗೆ ಇಳಿಯದಂತೆ ತಿಳಿಸಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಯ ಬಳಿ ಸೆಲ್ಫಿ ತೆಗೆದುಕೊಳ್ಳವುದನ್ನು ನಿಷೇಧಿಸಲಾಗಿದೆ.
