ಮುಂದಿನ 4 ದಿನ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ….!

ಬೆಂಗಳೂರು:

     ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ  ಯೆಲ್ಲೋ ಅಲರ್ಟ್‌ ನೀಡಿದೆ. ಬುಧವಾರ (ಜೂನ್‌ 4)ರಂದು ಹಾವೇರಿ, ಧಾರವಾಡ, ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು ಸೇರಿ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಈ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

    ಜೂನ್ 3 ಮತ್ತು 4ರಂದು ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

   ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 21°C ಇರಲಿದೆ.

   ಜೂನ್‌ 5ರಂದು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್‌ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಇನ್ನುಳಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

   ಜೂನ್‌ 6ರಂದು ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗಲಿದೆ. ಜೂನ್‌ 7ರಂದು ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದೆ.

Recent Articles

spot_img

Related Stories

Share via
Copy link