ಮಂಡ್ಯ:
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು.ಸಕ್ಕರೆ ನಾಡು ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ಸಮ್ಮೇಳನದ ಪ್ರಧಾನ ವೇದಿಕೆ ಮುಖ್ಯದ್ವಾರ ಮುಂಭಾಗ ಧ್ವಜಾರೋಹಣ ನೆರವೇರಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ರಾಷ್ಟ್ರ ಧ್ವಜವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತು ಧ್ವಜವನ್ನು ಕ.ಸಾ.ಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಅವರು, ನಾಡ ಧ್ವಜವನ್ನು ಪರಿಷತ್ತಿನ ಜಿಲ್ಲಾ ಸಂಚಾಲಕಿ ಡಾ. ಮೀರಾ ಶಿವಲಿಂಗಯ್ಯ ಅವರು ಧ್ವಜಾರೋಹಣ ಮಾಡಿದರು. ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾದ ಡಾ. ಗೊ.ರು. ಚನ್ನಬಸಪ್ಪ ಅವರ ಮೆರವಣಿಗೆಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿರವರು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಸಮ್ಮೇಳಾಧ್ಯಕ್ಷರಾದ ಡಾ. ಗೊ.ರು. ಚನ್ನಬಸಪ್ಪ ಅವರನ್ನು ಕಲಾ ತಂಡಗಳೊಂದಿಗೆ ಅದ್ಧೂರಿ ಮೆರವಣಿಗೆಯ ಮೂಲಕ ಸಮ್ಮೇಳನ ನಡೆಯುವ ಸ್ಥಳಕ್ಕೆ ಕರೆದೊಯ್ಯಲಾಯಿತು.ಮೈಸೂರು-ಬೆಂಗಳೂರು ಮುಖ್ಯ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಿಂದ ಪ್ರಾರಂಭವಾದ ಮೆರವಣಿಗೆಯು ಸಮ್ಮೇಳನ ನಡೆಯುವ ವೇದಿಕೆವರೆಗೆ ಸಾಗಿತು.
