ಬೆಂಗಳೂರು:
ಖ್ಯಾತ ಹೃದಯ ರೋಗ ತಜ್ಞ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಅಳಿಯ ಡಾ. ಸಿ ಎನ್ ಮಂಜುನಾಥ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹಗಳ ನಡುವೆ, ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರನ್ನು ಬುಧವಾರ ಸಂಜೆ ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಹಾಲಿ ಸಂಸದ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿಎನ್ ಮಂಜುನಾಥ್ ಸ್ಪರ್ಧಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೂಲಗಳ ಪ್ರಕಾರ ಮಂಡ್ಯ, ಹಾಸನ ಮತ್ತು ಕೋಲಾರ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಮತ್ತು ಮಂಜುನಾಥ್ ಅವರನ್ನು ಎರಡು ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ, ಬಿಜೆಪಿ ಚಿಹ್ನೆಯಲ್ಲಿ ಕಣಕ್ಕಿಳಿಸಲಾಗುತ್ತಿದೆ ಎನ್ನಲಾಗಿದೆ.
ನಾಳೆ ಬೆಳಗ್ಗೆ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸೇರಿದಂತೆ ಪ್ರಮುಖ ನಾಯಕರ ಸಮ್ಮುಖದಲ್ಲಿ ಮಂಜುನಾಥ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.