ರಾಜಸ್ಥಾನ
ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಹೇಳಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಕ್ಕಾಗಿ ಬಿಜೆಪಿ ತನ್ನ ಮುಸ್ಲಿಂ ಮುಖಂಡರೊಬ್ಬರನ್ನು ಪಕ್ಷದಿಂದ ಉಚ್ಛಾಟಿಸಿದೆ.
ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿಯನ್ನು ಪಕ್ಷದ ವರ್ಚಸ್ಸಿಗೆ ಕಳಂಕ ತಂದ ಆರೋಪದ ಮೇಲೆ ಪಕ್ಷದಿಂದ ಉಚ್ಚಾಟಿಸಲಾಗಿದೆ. ದೆಹಲಿಯಲ್ಲಿ ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡಿದ ಘನಿ, ರಾಜಸ್ಥಾನದಲ್ಲಿ 25 ಸ್ಥಾನಗಳಲ್ಲಿ 3-4 ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಹೇಳಿದ್ದರು. ರಾಜ್ಯದಲ್ಲಿ ಚುನಾವಣಾ ರ್ಯಾಲಿಗಳಲ್ಲಿ ಪ್ರಧಾನಿ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿದ ಹೇಳಿಕೆಗಳನ್ನು ಟೀಕಿಸಿದರು.
ಘನಿ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅವರ ವಿರುದ್ಧ ಕ್ರಮ ಕೈಗೊಂಡಿದೆ. ಬಿಕಾನೇರ್ ಸಿಟಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿ ಅವರಿಂದ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಬಿಜೆಪಿಗೆ ಕಳಂಕ ತರುವ ಪ್ರಯತ್ನ ನಡೆದಿದೆ ಎಂದು ಸಮಿತಿ ಅಧ್ಯಕ್ಷ ಓಂಕಾರ್ ಸಿಂಗ್ ಲಖಾವತ್ ಹೇಳಿದ್ದಾರೆ. ಇದನ್ನು ಅರಿತು ಪಕ್ಷವು ಈ ಕೃತ್ಯವನ್ನು ಅಶಿಸ್ತು ಎಂದು ಪರಿಗಣಿಸಿ ಉಸ್ಮಾನ್ ಘನಿ ಅವರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟಿಸಿದೆ.
ಬಿಕಾನೇರ್ ಲೋಕಸಭಾ ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಏಪ್ರಿಲ್ 19ರಂದು ಮತದಾನ ನಡೆದಿತ್ತು. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಚುನಾವಣಾ ರ್ಯಾಲಿಗಳಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಆಸ್ತಿಯನ್ನು ಮುಸ್ಲಿಮರಿಗೆ ಹಂಚುವುದಾಗಿ ಹೇಳಿದ್ದರು. ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ನೀಡಲು ಕಾಂಗ್ರೆಸ್ ಯೋಜಿಸಿದೆ ಎಂದು ಮೋದಿ ಆರೋಪಿಸಿದ್ದರು.