ಬೆಂಗಳೂರು :
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಫೆ.27) ರಾಜ್ಯಕ್ಕೆ ಭೇಟಿ ನೀಡಲಿದ್ದು, ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯವನ್ನು ಉದ್ಘಾಟಿಸಲಿದ್ದಾರೆ. ಹಲವು ಹೊಸ ಕಾರ್ಯಕ್ರಮಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಶಿವಮೊಗ್ಗ-ಶಿಕಾರಿಪುರ-ರಾಣಿಬೆನ್ನೂರು ರೈಲ್ವೆ ಮಾರ್ಗಕ್ಕೂ, ಹಲವು ಪ್ರಮುಖ ಹೆದ್ದಾರಿ ಯೋಜನೆಗೂ ಪ್ರಧಾನಿ ಅವರು, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಳಗಾವಿಯಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ 9 ಕೋಟಿ ಅರ್ಹ ರೈತರಿಗೆ ನೇರವಾಗಿ ನಗದು ಬಿಡುಗಡೆ ಮಾಡಲಿದ್ದಾರೆ. ಬೆಳಗಾವಿ ಆಧುನಿಕ ರೈಲು ನಿಲ್ದಾಣವನ್ನು ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದರು.
ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ಮಲೆನಾಡಿನ ಶಿವಮೊಗ್ಗದಲ್ಲಿ ಬಹುದಿನಗಳ ಬೇಡಿಕೆಯಾದ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡುತ್ತಿರುವುದು ಸಂತಸದ ಸಂಗತಿ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಆ ಭಾಗದ ವಾಣಿಜ್ಯ ಮತ್ತು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಈ ಯೋಜನೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








