ಬೆಂಗಳೂರು
ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಪಕ್ಷ ಹಾಗೂ ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಚುನಾವಣಾ ಹವಾ ಎಬ್ಬಿಸಲಿದ್ದಾರೆ.
ಮೋದಿ ಅವರು ಜನವರಿ ನಂತರ 7 ನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಚುನಾವಣಾ ಭಾಷಣ ಮಾಡಲಿದ್ದಾರೆ. ಜೊತೆಗೆ ಪಕ್ಷದ ಮುಖಂಡರ ಜೊತೆಗೆ ಮುಂದಿನ ಚುನಾವಣೆ ಸಿದ್ಧತೆ ಕುರಿತು ಚರ್ಚಿಸಲಿದ್ದಾರೆ.
ನರೇಂದ್ರ ಮೋದಿ ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೊದಲಿಗೆ ಅವರು ಚಿಕ್ಕಬಳ್ಳಾಪುರದಲ್ಲಿ ನಿರ್ಮಿಸಲಾದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಿ ಅವರ ಆಗಮನದ ಹಿನ್ನೆಲೆ ಜಿಲ್ಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆಗಳನ್ನು ನಡೆಸಲಾಗಿದೆ. ತಾಲೂಕಿನ ಮುದ್ದೇನಹಳ್ಳಿಯಲ್ಲಿ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ನ 350 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಮಧುಸೂದನ್ ಸಾಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.
ಚಿಕ್ಕಬಳ್ಳಾಪುರ ಆಸುಪಾಸಿನ ವಿದ್ಯಾರ್ಥಿಗಳು ಲಭ್ಯವಾಗಬಹುದಾದ ಹೊಸ ಅವಕಾಶಗಳನ್ನು ಪಡೆಯಲು ಮತ್ತು ಈ ಪ್ರದೇಶದ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸಲು ಸಹಾಯ ಮಾಡುವ ಉಪಕ್ರಮವಾಗಿ, ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಎಸ್‌ಎಂಎಸ್‌ಐಎಎಸ್‌ಆರ್)ಯನ್ನು ಸ್ಥಾಪಿಸಲಾಗಿದೆ. ಚಿಕ್ಕಬಳ್ಳಾಪುರದ ಗ್ರಾಮೀಣ ಪ್ರದೇಶ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಸ್ಥಾಪನೆಯಾಗಿರುವ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯವು ಮಾನವ ಶ್ರೇಷ್ಠತೆಗಾಗಿ ಈ ಆಸ್ಪತ್ರೆಯನ್ನು ಆರಂಭಿಸುತ್ತಿದೆ. ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಂರಕ್ಷಣಾ ಕ್ಷೇತ್ರವನ್ನು ವಾಣಿಜ್ಯೀಕರಣ ಮುಕ್ತಗೊಳಿಸುವ ದೂರದೃಷ್ಟಿಯಿಂದ ಈ ಆಸ್ಪತ್ರೆ ಸ್ಥಾಪಿಸಲಾಗಿದೆ.
ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ವೈದ್ಯಕೀಯ ಶಿಕ್ಷಣ ಮತ್ತು ಗುಣಮಟ್ಟದ ವೈದ್ಯಕೀಯ ಸೇವೆಯನ್ನು ಸಂಪೂರ್ಣ ಉಚಿತವಾಗಿ ಎಲ್ಲರಿಗೂ ಒದಗಿಸಲಿದೆ. 2023ರ ಶೈಕ್ಷಣಿಕ ವರ್ಷದಿಂದ ಈ ಸಂಸ್ಥೆಯು ಕಾರ್ಯಾರಂಭ ಮಾಡಲಿದೆ.
ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯಸಾಯಿ ಪ್ರೇಮಾಮೃತಂ ಭವನದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಸಮಾಧಿ, ಜನ್ಮ ಸ್ಥಳ ಮತ್ತು ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಲಿದ್ದಾರೆ.
ನಂತರ ಬೆಂಗಳೂರಿನಲ್ಲಿ ವೈಟ್‌ಫೀಲ್ಡ್ ಮೆಟ್ರೊ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ದೇಶಾದ್ಯಂತ ಚಲನಶೀಲತೆಯ ವಿಶ್ವ ದರ್ಜೆಯ ನಗರ ಮೂಲಸೌಕರ್ಯಗಳ ಅಭಿವೃದ್ಧಿಗೆ ಪ್ರಧಾನ ಮಂತ್ರಿ ಅವರು ವಿಶೇಷ ಗಮನ ಹರಿಸಿದ್ದಾರೆ. ಇದಕ್ಕೆ ಅನುಗುಣವಾಗಿ ಬೆಂಗಳೂರು ಮೆಟ್ರೊ ಹಂತ 2ರ ಅಡಿ, ವೈಟ್‌ಫೀಲ್ಡ್ (ಕಾಡುಗೋಡಿ) – ಕೃಷ್ಣರಾಜಪುರ ಮೆಟ್ರೊ ಲೈನ್‌ನ ರೀಚ್-1ರ 13.71 ಕಿ.ಮೀ ವಿಸ್ತರಣಾ ಮಾರ್ಗವನ್ನು ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೊ ನಿಲ್ದಾಣದಲ್ಲಿ ಪ್ರಧಾನಿ ಉದ್ಘಾಟಿಸಲಿದ್ದಾರೆ. ಸುಮಾರು 4,250 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಮೆಟ್ರೋ ಮಾರ್ಗದ ಉದ್ಘಾಟನೆಯು ಬೆಂಗಳೂರಿನ ಪ್ರಯಾಣಿಕರಿಗೆ ಸ್ವಚ್ಛ, ಸುರಕ್ಷಿತ, ತ್ವರಿತ ಮತ್ತು ಆರಾಮದಾಯಕ ಪ್ರಯಾಣ ಸೌಲಭ್ಯ ಒದಗಿಸಲಿದೆ. ಇದು ಸುಗಮ ಸಂಚಾರಕ್ಕೆ ಅನುವು ಮಾಡುವ ಜತೆಗೆ, ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ.
ಬಳಿಕ ದಾವಣಗೆರೆಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ. ಈ ನಡುವೆ ದಾವಣಗೆರೆಯಲ್ಲಿ ನಡೆಯಲಿರುವ ನಾಳಿನ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದ್ದಾರೆ.
ದಾವಣಗೆರೆಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ಗದಗ, ವಿಜಯನಗರ, ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ 10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದಲ್ಲಿ ಕೇಂದ್ರದ ಹಲವು ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಬಳಿಕ ಶಿವಮೊಗ್ಗ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹಿಂದಿರುಗಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ