ಮುಡಾ ಕೇಸ್‌ : ಏಕಪೀಠದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಿಎಂ

ಬೆಂಗಳೂರು:

   ಮುಡಾ ಪ್ರಕರಣದಲ್ಲಿ ತಮ್ಮ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮೋದನೆ ನೀಡಿರುವ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಈ ಕುರಿತು ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರ ಮತ್ತು ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

  ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಗುರುವಾರ ನಡೆಯಿತು. ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠವು ವಾದ-ಪ್ರತಿವಾದ ಅಲಿಸಿ ಮುಂದಿನ ವಿಚಾರಣೆಯನ್ನು ಜನವರಿ 25, 2025 ರಂದು ಮುಂದೂಡಿತು.

   ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಅಕ್ಟೋಬರ್ 24ರಂದು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠವು ಸೆಪ್ಟೆಂಬರ್ 24 ರಂದು ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರ ಅನುಮೋದನೆಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಸಿದ್ದರಾಮಯ್ಯ ಪತ್ನಿ ಪಾರ್ವತಿ ಬಿಎಂ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವಿದೆ. ಸಾಮಾಜಿಕ ಕಾರ್ಯಕರ್ತರಾದ ಟಿಜೆ ಅಬ್ರಹಾಂ, ಪ್ರದೀಪ್ ಕುಮಾರ್ ಮತ್ತು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ಮೂರು ಅರ್ಜಿಗಳ ಆಧಾರದ ಮೇಲೆ ಪ್ರಧಾನ ಪ್ರದೇಶದಲ್ಲಿ ಮುಡಾದಿಂದ 14 ಸೈಟ್‌ಗಳ ಹಂಚಿಕೆಯಲ್ಲಿನ ಅಕ್ರಮಗಳ ಆರೋಪದಲ್ಲಿ ತಮ್ಮ ವಿರುದ್ಧದ ತನಿಖೆಗೆ ಗೆಹ್ಲೋಟ್ ಅವರ ಅನುಮೋದನೆಯ ಕಾನೂನುಬದ್ಧತೆಯನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದರು.

  ಹೈಕೋರ್ಟ್ ಏಕ ಪೀಠದ ಆದೇಶದ ನಂತರ, ಮರುದಿನವೇ ಇಲ್ಲಿನ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆಗೆ ಆದೇಶಿಸಿ, ಡಿಸೆಂಬರ್ 24 ರೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿತು.ಮೈಸೂರಿನ ಲೋಕಾಯುಕ್ತ ಪೊಲೀಸರು ಸೆ.27ರಂದು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ, ಅವರ ಪತ್ನಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

  ಮುಡಾ ಸೈಟ್ ಹಗರಣದ ತನಿಖೆ ನಡೆಸ್ತಿರುವ ಲೋಕಾಯುಕ್ತ ಪೊಲೀಸರಿಗೆ ಪತ್ರ ಬರೆದಿರುವ ಜಾರಿ ನಿರ್ದೇಶನಲಾಯ, ಮುಖ್ಯಮಂತ್ರಿ ಪತ್ನಿ ಪಾರ್ವತಿ ಅವರಿಗೆ ಹಂಚಿರುವ ಸೈಟ್​ಗಳೇ ಅಕ್ರಮವಾಗಿದ್ದು, ಈ ಸಂಬಂಧ ತಮ್ಮ ತನಿಖೆಯಲ್ಲಿ ಪ್ರಮುಖ ಸಾಕ್ಷ್ಯಗಳು ಲಭ್ಯವಾಗಿವೆ. ಹಾಗೇ ಒಟ್ಟು ಮುಡಾ ವ್ಯಾಪ್ತಿಯಲ್ಲಿ 700 ಕೋಟಿ ರೂ ಮೌಲ್ಯದ 1 ಸಾವಿರದ 95 ಸೈಟ್​ಗಳನ್ನು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಹಾಗೂ ಪ್ರಭಾವಿಗಳಿಗೆ ಅಕ್ರಮವಾಗಿ ಹಂಚಲಾಗಿದೆ ಎಂದು ತನಿಖೆಯಲ್ಲಿ ತಿಳಿದು ಬಂದಿದ್ದು ಈ ಬಗ್ಗೆ ಕ್ರಮವಹಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಮನವಿ ಮಾಡಿತ್ತು.

Recent Articles

spot_img

Related Stories

Share via
Copy link