ಬೆಂಗಳೂರು:
ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಸೇರಿದಂತೆ ಕಾನೂನು ತಜ್ಞರೊಂದು, ಆಪ್ತರು ಮತ್ತು ವಕೀಲರ ಜೊತೆ ಸಭೆ ನಡೆಸಿದ ಸಿಎಂ ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.ಸಿಎಂ ಪರ ವಕಾಲತ್ತು ವಹಿಸಲು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ಕಬಿಲ್ ಸಿಬಲ್ ನವದೆಹಲಿಯಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಸೋಮವಾರ ಪ್ರಕರಣದ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವ ಹಿನ್ನೆಲೆಯಲ್ಲಿ ಸೋಮವಾರ ಮಂತ್ರಾಲಯದ ಗುರು ರಾಘವೇಂದ್ರ ದೇಗುಲಕ್ಕೆ ಭೇಟಿ ನೀಡಬೇಕಿದ್ದ ಸಿದ್ದರಾಮಯ್ಯ, ಈ ಭೇಟಿಯನ್ನು ರದ್ದುಗೊಳಿಸಿದ್ದಾರೆಂದು ತಿಳಿದುಬಂದಿದೆ.
ಇಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಿರುವ ಸಿಎಂ ಪರ ವಕೀಲರು, ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಕಾನೂನು ಬಾಹಿರ ಎಂದು ವಾದ ಮಂಡಿಸಲಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 17ಎ ಅಡಿ ಪ್ರಾಸಿಕ್ಯೂಷನ್ ನೀಡಿರುವುದು ನಿಯಮಗಳ ಉಲ್ಲಂಘನೆಯಾಗಿದೆ. ಅಲ್ಲದೇ, ಪ್ರಾಸಿಕ್ಯೂಷನ್ ನೀಡುವ ಬಗ್ಗೆ 2021ರ ಸೆಪ್ಟಂಬರ್‌ನಲ್ಲಿ ಕೇಂದ್ರ ಸರ್ಕಾರವೇ ಚೆಕ್‌ಲಿಸ್ಟ್ ನೀಡಿದೆ. ಆ ಚೆಕ್‌ಲಿಸ್ಟ್ ಕೂಡಾ ಪಾಲನೆಯಾಗಿಲ್ಲ.
ಇನ್ನು ಡಿಜಿ-ಐಜಿಪಿ ಮಟ್ಟದ ಅಧಿಕಾರಿಗಳು ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಬೇಕು. ಅನುಮತಿ ಕೇಳಲು ತನಿಖಾ ವರದಿ ಇರಬೇಕು. ಆದರೆ, ಇಲ್ಲಿ ತನಿಖಾ ವರದಿಯೂ ಇಲ್ಲ, ಅಧಿಕಾರಿಗಳೂ ಇಲ್ಲ. ಖಾಸಗಿ ವ್ಯಕ್ತಿಗಳ ದೂರಿನನ್ವಯ ಪ್ರಾಸಿಕ್ಯೂಷನ್‌ಗೆ ನೀಡಿದ್ದಾರೆ. ರಾಜ್ಯಪಾಲರೇ ತನಿಖಾಧಿಕಾರಿಯಂತೆ ವರ್ತಿಸಿದ್ದಾರೆ ಎಂದು ಸಿಎಂ ಪರ ವಕೀಲರು ವಾದ ಮಂಡಿಸಲು ಸಿದ್ಧತೆ ನಡೆಸಿದ್ದಾರೆ.
ಏತನ್ಮಧ್ಯೆ, ಪಕ್ಷದ ಹೈಕಮಾಂಡ್ ನಾಯಕರಾದ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪ್ರಕರಣ ದಾಖಲಿಸುವ ಸಾಧಕ-ಬಾಧಕಗಳ ಕುರಿತು ಸಿಎಂ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಪಕ್ಷದ 136 ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗಸ್ಟ್ 22, ಗುರುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಗೆ ಸಿದ್ದರಾಮಯ್ಯ ಕರೆ ನೀಡಿದ್ದು, ಈ ಸಭೆ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಾದರೆ ಅವರು ಸಿಎಂ ಆಗಿ ಮುಂದುವರಿಯಬೇಕೇ ಅಥವಾ ರಾಜೀನಾಮೆ ನೀಡಬೇಕೇ ಎಂಬುದರ ಕುರಿತಂತೆ ಈ ಸಭೆಯಲ್ಲಿ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಆಗಸ್ಟ್ 23 ರಂದು ಸಿದ್ದರಾಮಯ್ಯ ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ನವದೆಹಲಿಗೆ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.ಈ ನಡುವೆ ಪ್ರಾಸಿಕ್ಯೂಷನ್’ಗೆ ರಾಜ್ಯಪಾಲರು ನೀಡಿದ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ, ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಕಲ್ಯಾಣ-ಕರ್ನಾಟಕದ ಎಸ್‌ಸಿ/ಎಸ್‌ಟಿ ಶಾಸಕರು, ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಸೇರಿದಂತೆ ಖರ್ಗೆ ಬೆಂಬಲಿಗರು ಭಾನುವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಸಾಕ್ಷ್ಯಗಳಿಲ್ಲ. ಹೀಗಾಗಿ ಇದು ದೊಡ್ಡ ಸಮಸ್ಯೆಯೇ ಅಲ್ಲ. ಆದರೆ, ಎಫ್‌ಐಆರ್ ದಾಖಲಾದರೆ ಮುಖ್ಯಮಂತ್ರಿ ಸ್ಥಾನಕ್ಕೆ ಸಮಸ್ಯೆಗಳಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.