ಮುಡಾ ಹಗರಣ : ಸಿಎಂ ಸಿದ್ದರಾಮಯ್ಯಗೆ BJP ಆಗ್ರಹ

ಬೆಂಗಳೂರು:

  ಮುಡಾ ಹಗರಣ ಪ್ರಕರಣದ ರಿಟ್ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮಂಗಳವಾರ ಆಗ್ರಹಿಸಿದೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಹೈಕೋರ್ಟ್ ತೀರ್ಪು ಪಕ್ಷದ ಹೋರಾಟಕ್ಕೆ ಸಂದ ಜಯ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಹೈಕೋರ್ಟ್‌ನ ತೀರ್ಪು ಸಾಬೀತಾಗಿದೆ ಎಂದು ಹೇಳಿದ್ದಾರೆ.

   ಹಗರಣ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಬಿಜೆಪಿ ತೀರ್ಮಾನಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಲಯದ ಆದೇಶವನ್ನು ಗೌರವಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸುದೀರ್ಘ ಚರ್ಚೆಯ ನಂತರ ಈ ಆದೇಶ ಬಂದಿದೆ. ಹಲವು ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಕೇಂದ್ರ ಸರ್ಕಾರದ ಏಜೆಂಟ್ ಎಂದು ಕರೆದಿದ್ದರು. ಕೋರ್ಟ್ ಆದೇಶ ನೀಡಿದ್ದು, ರಾಜ್ಯಪಾಲರ ಕ್ರಮಗಳನ್ನು ಹೈಕೋರ್ಟ್ ಮಾನ್ಯ ಮಾಡಿದೆ, ತನಿಖೆಗೆ ಆದೇಶಿಸಿರುವ ಅವರ ನಿರ್ಧಾರ ಕಾನೂನುಬದ್ಧತೆ ಮತ್ತು ಸಾಂವಿಧಾನಿಕ ತತ್ವಗಳನ್ನು ಆಧರಿಸಿದೆ ಎಂದು ಹೇಳಿದೆ. ಇದೀಗ ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದ ನಾಯಕರು ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು.

   ಸಿದ್ದರಾಮಯ್ಯ ಅವರು ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಆಡಳಿತ ನಡೆಸುವುದಾಗಿ ಹೇಳಿಕೊಂಡಿದ್ದರು. ಈಗ ನ್ಯಾಯಾಲಯವು ತೀರ್ಪು ಪ್ರಕಟಿಸಿದ್ದು, ನೈತಿಕ ಆಧಾರದ ಮೇಲೆ ನಾವು ಅವರ ರಾಜೀನಾಮೆಗೆ ಒತ್ತಾಯಿಸುತ್ತೇವೆ ಎಂದರು.

   ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಾತನಾಡಿ, ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ 2013ರಿಂದ 2018ರ ಅವಧಿಯಲ್ಲಿ ಕೆ.ಜೆ.ಜಾರ್ಜ್ ಮತ್ತು ಸಂತೋಷ್ ಲಾಡ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಬಿ ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನು ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕೆ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಅವರು ರಾಮಕೃಷ್ಣ ಹೆಗಡೆ ಅವರ ಶಿಷ್ಯ ಎಂದು ಹೇಳಿಕೊಳ್ಳುತ್ತಾರೆ. ಈಗ ಹೈಕೋರ್ಟ್‌ ತೀರ್ಪು ನೀಡಿದೆ. ರಾಜೀನಾಮೆ ನೀಡಿದ ಬಳಿಕವೇ ಅವರು ಮುಂದಿನ ಹಂತದಲ್ಲಿ ಪ್ರಶ್ನೆ ಮಾಡಲಿ ಎಂದು ಹೇಳಿದರು,