ಬೀದರ್:
ಮುಸ್ಲಿಮರಿಗೆ ನೀಡಲಾಗಿರುವ ಶೇ. 4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿತ್ತು. ಈಗಲೂ ಆ ಮೀಸಲಾತಿ ಮುಂದುವರಿದಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಒಬಿಸಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲಾಗಿದೆ ಎಂಬ ಮೋದಿ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ , ಹಿಂದೆ ಚಿನ್ನಪ್ಪ ರೆಡ್ಡಿ ಆಯೋಗವು ಮುಸ್ಲಿಮರಿಗೆ 4%ರಷ್ಟು ಮೀಸಲಾತಿ ಕೊಡಬೇಕು ಎಂದು ಶಿಫಾರಸು ಮಾಡಿತ್ತು. ಅದರಂತೆ ಸುಮಾರು 28 ವರ್ಷಗಳಿಂದ ಮುಸ್ಲಿಮರಿಗೆ 4% ರಷ್ಟು ಮೀಸಲಾತಿ ಮುಂದುವರೆದಿದೆ.
ಬೊಮ್ಮಾಯಿ ಸರ್ಕಾರ ಈ ಮೀಸಲಾತಿಯನ್ನು ರದ್ದು ಮಾಡಿತ್ತು. ಈ ಮೀಸಲಾತಿಯನ್ನು ಹಿಂಪಡೆದಿದ್ದಕ್ಕೆ ಈ ವರ್ಗ ಸುಪ್ರಿಂ ಕೋರ್ಟ್ ಮೊರೆ ಹೋಯಿತು. ಸುಪ್ರೀಂ ಕೋರ್ಟ್ ಈಗಿರುವ ಮೀಸಲಾತಿಯನ್ನು ಹಾಗೆಯೇ ಮುಂದುವರಿಸಿ ಎಂದು ಸೂಚಿಸಿತ್ತು. ಆ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್ ನ ಮುಂದೆ 4%ಮೀಸಲಾತಿಯನ್ನು ಮುಂದುವರೆಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದು, ಈ ಮೀಸಲಾತಿ ಈಗಲೂ ಮುಂದುವರೆಯುತ್ತಿದೆ ಎಂದರು.
ಉದ್ಯೋಗ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಮುಸ್ಲಿಮರನ್ನು ಇತರೇ ಹಿಂದುಳಿದ ವರ್ಗಗಳ ಕೆಟಗರಿಗೆ ಸೇರಿಸಲು ಶಿಫಾರಸು ಮಾಡಿದೆ. ಈ ವಿಚಾರವನ್ನು ಪ್ರಸ್ತಾಪ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದರು.
ಮಧ್ಯಪ್ರದೇಶದ ಮೊರೇನಾದಲ್ಲಿ ನಡೆದ ಚುನಾವಣಾ ಪ್ರಚಾರ ಭಾಷಣದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಾತ್ರೋರಾತ್ರಿ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದ ಎಲ್ಲ ವರ್ಗವನ್ನು ಒಬಿಸಿಗೆ ಸೇರಿಸಿ ಆದೇಶ ಹೊರಡಿಸಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಬಿಸಿ ಮಾನ್ಯತೆ ನೀಡಿವ ಮೂಲಕ ಒಬಿಸಿ ಜನರ ಅವಕಾಶಗಳನ್ನು ಕಳ್ಳತನದಿಂದ ಕಿತ್ತುಕೊಂಡಿದೆ ಎಂದು ಆಕ್ರೋಶ ಹೊರಹಾಕಿದ್ದರು.