ಬೆಂಗಳೂರು:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಮತ್ತು ಕಾಂಗ್ರೆಸ್ ಸರ್ಕಾರ ಅಕ್ರಮವೆಸಗಿದೆ ಎಂದು ಆರೋಪಿಸಿದೆ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಬೆಂಗಳೂರಿನ ಮೈಸೂರು ರಸ್ತೆಯ ಕೆಂಗೇರಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಹಾಗೂ ಹೆಚ್ ಡಿ ಕುಮಾರಸ್ವಾಮಿ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶಗಳನ್ನು ಹಂಚಲಾಗಿದೆ ಎಂಬ ಆರೋಪ ಬಿಜೆಪಿ, ಜೆಡಿಎಸ್ ನದ್ದಾಗಿದೆ. ಕೆಂಗೇರಿಯ ನೈಸ್ ಜಂಕ್ಷನ್ ಬಳಿ ಇರುವ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಪಾದಯಾತ್ರೆಗೆ ಚಾಲನೆ ನೀಡಿದರು. ಬೆಂಗಳೂರಿನಿಂದ ಮೈಸೂರಿಗೆ ಬೃಹತ್ ಪಾದಯಾತ್ರೆ ಆರಂಭಗೊಂಡಿದ್ದು ಅಲ್ಲೀಗ ಭಾರೀ ಸಂಚಾರದಟ್ಟಣೆ ಉಂಟಾಗಿದೆ. ಡಾ. ರಾಧಾ ಮೋಹನ್ ದಾಸ್ ಅಗರವಾಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಹಾಜರಿದ್ದರು. ಜೆಡಿಸ್ ಹಾಗೂ ಬಿಜೆಪಿ ಜಂಟಿಯಾಗಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯ ಗೀತೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಬಿಡುಗಡೆ ಮಾಡಿದರು.
ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಕರ್ನಾಟಕದ ದಿಕ್ಕು ಬದಲಿಸಲಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧದ ಹೋರಾಟ ಇದಾಗಿದೆ. ಕರುನಾಡ ಜನರ ಸುಲಿಗೆ ಮಾಡಿ ರಾಹುಲ್ ಗಾಂಧಿ ಅವರಿಗೆ ಕಳುಹಿಸಿ ಕೊಡುತ್ತಿದೆ ಕರ್ನಾಟಕ ಕಾಂಗ್ರೆಸ್ ಎಂದು ಹೇಳಿದರು.
ಪಾದಯಾತ್ರೆ ಎಲ್ಲಿ, ಎಷ್ಟು ದಿನ:
ಇಂದಿನಿಂದ ಆಗಸ್ಟ್ 10ರವರೆಗೆ 140 ಕಿಮೀ ಪಾದಯಾತ್ರೆ ಇದಾಗಿದೆ. ಕೆಂಗೇರಿಯಲ್ಲಿ ಉದ್ಘಾಟನೆ, ಮೈಸೂರಿನ ಸಮಾರೋಪ ಕಾರ್ಯಕ್ರಮ ಹೊರತುಪಡಿಸಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬಹಿರಂಗ ಸಭೆಗಳು ನಡೆಯಲಿವೆ. ಬೆಳಗ್ಗೆ 10 ಕಿ.ಮೀ. ಮಧ್ಯಾಹ್ನ ಊಟದ ನಂತರ 10 ಕೀ.ಮೀನಂತೆ ಪ್ರತಿದಿನ 20 ಕಿ.ಮೀ. ಕ್ರಮಿಸಲು ಯೋಜಿಸಲಾಗಿದೆ. ಆಗಸ್ಟ್ 10ರಂದು ಬೆಳಗ್ಗೆ 10.30ಕ್ಕೆ ಮೈಸೂರಿನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ.
ವಿಧಾನಸಭೆ ಕ್ಷೇತ್ರವಾರು 200 ಜನರು ಸೇರಿ ಪ್ರತಿದಿನ ಐದಾರು ಸಾವಿರ ಜನರು ಭಾಗಹಿಸಲಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಸೇರಿ ರಾಜ್ಯದ ಎಲ್ಲ ಜಿಲ್ಲೆಗಳ ಮುಖಂಡರು, ಪದಾಧಿಕಾರಿಗಳು ಏಳು ದಿನವೂ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯ ಯಶಸ್ಸಿಗೆ 20ರಿಂದ 22 ವಿಭಾಗಗಳನ್ನು ರಚಿಸಲಾಗಿದೆ.