ಬೆಂಗಳೂರು
‘ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
‘ ಕನ್ನಡಿಗರೇ ಎಚ್ಚರ….!! ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ’ ಎಂದು ಆರೋಪಿಸಿದ್ದಾರೆ.