ಮರು ಮತ ಎಣಿಕೆ ನಡೆದರೂ ನಂಜೇಗೌಡ ಅವರೆ ಮತ್ತೆ ಗೆಲ್ಲುವ ವಿಶ್ವಾಸವಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು: 

    ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ‌ ಕ್ರಮ, ರಸ್ತೆ ಗುಂಡಿಗಳನ್ನು ಮುಚ್ಚಲು ಗಡವು ನಿಗದಿ, ಪಾಲಿಕೆ ಆಯುಕ್ತರಿಗೆ ನಗರ ಸಂಚಾರ ವೇಳಾಪಟ್ಟಿ ನೀಡಲು ಸೂಚಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದರು. ವಿಧಾನಸೌಧದಲ್ಲಿ ಮಂಗಳವಾರ ಜಿಬಿಎ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼರಸ್ತೆ ಬದಿ ಸೇರಿದಂತೆ ನಗರಾದ್ಯಂತ ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದೇನೆ. ವಾಹನಗಳಲ್ಲಿ ಕಸ ತಂದು ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಬೆಂಗಳೂರು ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಹಾಗೂ ಸಂಚಾರಿ ಪೊಲೀಸರೊಟ್ಟಿಗೆ ಚರ್ಚೆ ನಡೆಸಲಾಗಿದೆʼ ಎಂದರು.

   ʼಗಡುವಿನಲ್ಲಿ ರಸ್ತೆಗುಂಡಿಗಳನ್ನು ಮುಚ್ಚಬೇಕು, ಈ ಬಗ್ಗೆ ಗಡುವಿನ ವೇಳಾಪಟ್ಟಿ ತಯಾರಿಸಿ ನನಗೆ ನೀಡಬೇಕು. ಸಂಚಾರಿ ಪೊಲೀಸ್ ವಿಭಾಗದವರು ಸಹ ರಸ್ತೆಗುಂಡಿಗಳ ಬಗ್ಗೆ ಮಾಹಿತಿ ನೀಡಬೇಕು ಹಾಗೂ ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸೂಚಿಸಿದ್ದೇನೆʼ ಎಂದು ಅವರು ಹೇಳಿದರು. 

   ʼಪಾಲಿಕೆಗಳ ಆಯುಕ್ತರು ಪ್ರತಿದಿನ ಬೆಳಿಗ್ಗೆ ನಗರ ಸಂಚಾರದ ಬಗ್ಗೆ ನನಗೆ ಮಾಹಿತಿ ನೀಡಬೇಕು ಎಂದು ಹೇಳಿದ್ದೇನೆ. ಯಾವುದೇ ಕೆಲಸ ತೆಗೆದುಕೊಂಡರೂ ಗುಣಮಟ್ಟ ಕಾಯ್ದುಕೊಳ್ಳಬೇಕು. ಅಲ್ಲಿಂದ ಇಲ್ಲಿ, ಇಲ್ಲಿಂದ ಅಲ್ಲಿ ಕೆಲಸ ಮಾಡಲಾಗಿದೆ ಎಂದು ಯಾರೂ ಬೋಗಸ್ ಬಿಲ್ ಬರೆಯುವಂತಿಲ್ಲ. ಒಂದೊಮ್ಮೆ ಈ ರೀತಿಯಾದರೆ ಇದಕ್ಕೆಲ್ಲಾ ಅಧಿಕಾರಿಗಳೇ ಹೊಣೆʼ ಎಂದು ತಿಳಿಸಿದರು.‌ 

  ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ಕುರಿತು ನ್ಯಾಯಾಲಯದ ತೀರ್ಪಿನ ಬಗ್ಗೆ ಕೇಳಿದಾಗ, ʼನ್ಯಾಯಲಯದ ಮರು ಎಣಿಕೆ ಆದೇಶ ಆಶ್ಚರ್ಯ ತಂದಿದೆ. ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಮರು ಮತ ಎಣಿಕೆ ನಡೆದರು ನಂಜೇಗೌಡ ಅವರು ಮತ್ತೆ ಗೆಲ್ಲುವ ವಿಶ್ವಾಸವಿದೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.

Recent Articles

spot_img

Related Stories

Share via
Copy link