ಕೋಲ್ಕತಾ:
ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಅನಾಗರೀಕ, ನಾಚಿಕೆಗೇಡಿನ ಘಟನೆ ಖಂಡಿಸಲು ನನ್ನ ಬಳಿ ಯಾವುದೇ ಪದಗಳಿಲ್ಲ ಎಂದು ಹೇಳಿದ್ದಾರೆ.
ಕುಟುಂಬಸ್ಥರ ವಿರೋಧದ ನಡುವಲ್ಲೂ ಮಾಹಿತಿ ನೀಡದೆಯೇ ಪೊಲೀಸರು ಅತ್ಯಾಚಾರ ಸಂತ್ರಸ್ತೆಯ ಶವವನ್ನು ದಹನ ಮಾಡಿರುವುದು ನಿಜಕ್ಕೂ ನಾಚಿಕೆಗೇಡಿನ ಕೆಲಸವಾಗಿದೆ. ಚುನಾವಣೆ ವೇಳೆ ಘೋಷಣೆಗಳನ್ನು ಮಾಡುವುದು ಭರವಸೆಗಳನ್ನು ನೀಡುವುದೆಲ್ಲವೂ ಬರೀ ಬೂಟಾಟಿಕೆ ಮತ್ತು ಆ ಸಮಯ ಸಾಧಕ ವರ್ತನೆಯಾಗಿದೆ ಎಂದು ತೀವ್ರವಾಗಿ ಖಂಡಿಸಿದ್ದಾರೆ.
2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯ ಗ್ಯಾಂಗ್ರೇಪ್ ಮಾದರಿಯಲ್ಲೇ ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದಿದ್ದು, ಸೆ. 14ರಂದು ಯುವತಿಯು ತಮ್ಮ ಜಮೀನಿನಲ್ಲಿ ತಾಯಿಯೊಂದಿಗೆ ಮೇವು ತರಲು ಹೋಗಿದ್ದಾಗ ನಾಲ್ವರು ಕಾಮುಕರು ಎಳೆದೊಯ್ದು ಅತ್ಯಾಚಾರ ವೆಸಗಿದ್ದಾರೆ. ಅಲ್ಲದೆ, ಆಕೆಯ ನಾಲಿಗೆಯನ್ನು ಕತ್ತರಿಸಿದ್ದಾರೆ. ಆಕೆಯ ಬೆನ್ನುಮೂಳೆ ಮತ್ತು ಕುತ್ತಿಗೆಗೆ ಹಾನಿ ಮಾಡಿದ್ದಾರೆ. ಗಂಭೀರ ಗಾಯಗಳಿಂದ ದೆಹಲಿಯ ಸಫ್ದಾರ್ ಜಂಗ್ ಆಸ್ಪತ್ರೆಗೆ ದಾಖಲಾಗಿದ್ದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದರು.