ನವದೆಹಲಿ:
ಮಹಾರಾಷ್ಟ್ರದ ಸರ್ಕಾರ ರಚನೆ ವಿವಾದವು ಸುಪ್ರೀಂ ಕೊರ್ಟ್ ಮೆಟ್ಟಿಲೇರಿದ್ದು ದೇವೇಂದ್ರ ಫಡ್ನವೀಸ್ ಸರ್ಕಾರವು ಅನಧಿಕೃತವಾಗಿ ಸರ್ಕಾಅರ ರಚನೆ ಮಾಡಿದೆ ಎಂದು ಶಿವಸೇನೆ ಮೇಲ್ಮನವಿ ಸಲ್ಲಿಸಿತ್ತು, ಇದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡುವ ಮೂಲಕ ಫಡ್ನವೀಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ನೀಡಿದೆ .ಇಷ್ಟು ದಿನ ಇದ್ದ ರಾಷ್ಟ್ರಪತಿ ಆಳ್ವಿಕೆಯನ್ನು ತರಾತುರಿಯಿಂದ ಹಿಂಪಡೆಯುವುದರ ಹಿಂದೆ ಕಾಣದ ಶಕ್ತಿಗಳ ಕೈವಾಡವಿದ್ದು ಸರ್ಕಾರದ ಅಮಾನತ್ತಿಗಾಗಿ ಮೇಲ್ಮನವಿ ಸಲ್ಲಿಸಲಾಗಿತ್ತು .
ಇಂದಿನ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ರಾಜ್ಯಪಾಲರಿಗೆ ಮಹಾರಾಷ್ಟ್ರ ಸರ್ಕಾರ ರಚನೆ ಬಗ್ಗೆ ಸಂಬಂಧಿಸಿದ ದಾಖಲೆಗಳು ಮತ್ತು ಅವುಗಳಿಗೆ ಪೂರಕವಾದ ಪತ್ರಗಳನ್ನು ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶಿಸಿ ಪ್ರಕರಣದ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಸರ್ಕಾರ ರಚನೆ ಹಕ್ಕು ಮಂಡನೆ ವೇಳೆಯಲ್ಲಿ ದೇವೇಂದ್ರ ಫಡ್ನವಿಸ್ ಅವರು ರಾಜ್ಯಪಾಲರಿಗೆ ಸಲ್ಲಿಸಿದ ಪತ್ರವನ್ನು ಕೂಡ ನಾಳೆ ಬೆಳಗ್ಗೆ 10.30ರ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ದಾಖಲೆ, ಪತ್ರಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿದ ಬಳಿಕ ಸುಪ್ರೀಂ ಕೋರ್ಟ್ ಆದೇಶವನ್ನು ನೀಡಲಿದೆ ಎಂದು ತಿಳಿದು ಬಂದಿದೆ.
ಇಂದು ರಿಟ್ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಎನ್ ವಿ ರಮಣ, ಅಶೋಕ್ ಭೂಷಣ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ನ್ಯಾಯಪೀಠ ಕೇಂದ್ರ ಸರ್ಕಾರ, ಮಹಾರಾಷ್ಟ್ರ ಸರ್ಕಾರ, ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಗೆ ನೊಟೀಸ್ ಜಾರಿ ಮಾಡಿದೆ.
ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ನಿರ್ಧಾರ ನಿರಂಕುಶ ಮತ್ತು ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿ ಕಾಂಗ್ರೆಸ್, ಎನ್ ಸಿಪಿ ಹಾಗೂ ಶಿವಸೇನೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದವು. ಅಲ್ಲದೆ ರಾಜ್ಯಪಾಲರು ದೇವೇಂದ್ರ ಫಡ್ನವಿಸ್ ಅವರು ಬಹುಮತ ಸಾಬೀತುಪಡಿಸಲು ಒಂದು ವಾರ ಕಾಲಾವಕಾಶ ನೀಡುವುದು ಕಾನೂನು ಬಾಹಿರವಾಗಿದ್ದು, ಇದು ಶಾಸಕರ ಕುದುರೆ ವ್ಯಾಪಾರಕ್ಕೆ ಅವಕಾಶ ನೀಡಿದಂತಾಗುತ್ತದೆ. ಹೀಗಾಗಿ 24 ಗಂಟೆಯಲ್ಲಿ ಬಹುಮತ ಸಾಬೀತಪಡಿಸುವಂತೆ ಸೂಚಿಸಬೇಕು ಎಂದು ಮೂರು ಪಕ್ಷಗಳು ಮನವಿ ಮಾಡಿದ್ದವು.
ಬಿಜೆಪಿಗೆ ಸರ್ಕಾರ ರಚನೆಗೆ ಬೇಕಾದ ಬಹುಮತಕ್ಕೆ 40 ಸ್ಥಾನಗಳ ಕೊರತೆ ಇದ್ದರೂ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಹಿಂದೆ, ನವೆಂಬರ್ 10ರಂದು ಸರ್ಕಾರ ರಚಿಸುವಂತೆ ರಾಜ್ಯಪಾಲರು ಬಿಜೆಪಿಗೆ ಆಹ್ವಾನ ನೀಡಿತ್ತು. ಆಗ, ಬಿಜೆಪಿ ಬಹುಮತಕ್ಕೆ ಬೇಕಾದ ಸಂಖ್ಯೆ ಇಲ್ಲದ ಕಾರಣ, ಸರ್ಕಾರ ರಚನೆಯಿಂದ ಹಿಂದೆ ಸರಿದಿತ್ತು. ಸರ್ಕಾರ ರಚನೆಗೆ ಶಿವಸೇನೆ, ಎನ್ಸಿಪಿ ಹಾಗೂ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಇದ್ದರೂ, ಬಹುಮತ ಇಲ್ಲದ ಪಕ್ಷಕ್ಕೆ ರಾಜ್ಯಪಾಲರು ಸರ್ಕಾರ ರಚಿಸಲು ಅವಕಾಶ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.