ಆಪರೇಷನ್ ಕಮಲ: ಮೌನ ಮುರಿದ ಬಿಜೆಪಿ ವರಿಷ್ಠರು

ನವದೆಹಲಿ

       ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ನಡೆಯುತ್ತಿರುವ ಪ್ರಯತ್ನದಿಂದ ಉಂಟಾಗಿರುವ ರಾಜಕೀಯ ಬಿಕ್ಕಟ್ಟು, ಆರೋಪ-ಪ್ರತ್ಯಾರೋಪಗಳ ಬಗ್ಗೆ ಇದೇ ಮೊದಲ ಬಾರಿಗೆ ಬಿಜೆಪಿ ವರಿಷ್ಠರು ಪ್ರತಿಕ್ರಿಯೆ ನೀಡಿದ್ದಾರೆ. ಇಡೀ ಬಿಕ್ಕಟ್ಟಿಗೆ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

        ಕರ್ನಾಟಕದಲ್ಲಿ ಉತ್ತಮ ಆಡಳಿತ ಮತ್ತು ಸ್ಥಿರ ಸರ್ಕಾರ ನೀಡಲು ಕಾಂಗ್ರೆಸ್ ನಾಯಕತ್ವ ವಿಫಲವಾಗಿದೆ. ಈಗ ಅವರು ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ ಈ ಆಟದಲ್ಲಿ ಭಾಗವಹಿಸಲು ಬಿಜೆಪಿ ಸಿದ್ಧವಿಲ್ಲ. ಇದಕ್ಕೆಲ್ಲಾ ಕಾಂಗ್ರೆಸ್ ಪಕ್ಷವೇ ಕಾರಣ? ಎಂದು ಬಿಜೆಪಿಯ ರಾಜ್ಯ ಉಸ್ತುವಾರಿ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ಮುರಳೀಧರ್ ರಾವ್ ಟ್ವೀಟ್ ಮಾಡಿದ್ದಾರೆ.

        ಕುಮಾರಸ್ವಾಮಿ ಸರ್ಕಾರ ಪತನಗೊಳ್ಳುವುದನ್ನು ಕಾಯಬೇಡಿ, ಲೋಕಸಭಾ ಚುನಾವಣೆಯ ಕೆಲಸಗಳಿಗೆ ಆದ್ಯತೆ ನೀಡಿ ಎಂದು ಬಿಜೆಪಿ ಕೇಂದ್ರ ನಾಯಕತ್ವ ರಾಜ್ಯದ ನಾಯಕರಿಗೆ ಸೂಚಿಸಿದ ಬೆನ್ನಲ್ಲೇ ಕಳೆದ ಎರಡು ದಿನಗಳಿಂದ ಬಿಜೆಪಿ ಆಡಳಿತ ಇರುವ ಹರ್ಯಾಣದ ಗುರುಗಾಂವ್ ರೆಸಾರ್ಟ್ ಒಂದರಲ್ಲಿ ರಾಜ್ಯದ ಬಿಜೆಪಿ ಶಾಸಕರು ನೆಲೆಸಿದ್ದಾರೆ.

       ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯದ ಹಿರಿಯ ನಾಯಕರು, ಶಾಸಕರನ್ನು ಈಗಾಗಲೇ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಭೇಟಿ ಮಾಡಿ ಚರ್ಚಿಸಿದ್ದಾರೆ.

        2018 ವಿಧಾನಸಭಾ ಚುನಾವಣೆ ನಡೆದ ಬೆನ್ನಲ್ಲೇ ಮೇ ತಿಂಗಳಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸರ್ಕಾರ ರಚಿಸುವ ಪ್ರಯತ್ನ ವಿಫಲವಾಗಿತ್ತು. ಆದ್ದರಿಂದ ಇಂತಹ ಪ್ರಯತ್ನಗಳಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಮತ್ತೆ ಇಂತಹ ಮುಜುಗರ ತಂದೊಡ್ಡಬೇಡಿ ಎಂದು ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಎಚ್ಚರಿಕೆ ಕೂಡ ನೀಡಿದೆ ಎನ್ನಲಾಗಿದೆ.

         ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು ಕಠಿಣ ಪರಿಶ್ರಮದಿಂದ ಲೋಕಸಭಾ ಚುನಾವಣೆಯನ್ನು ಎದುರಿಸಬೇಕು ಎಂದು ನಾವು ನಿರ್ದೇಶನ ನೀಡಿದ್ದೇವೆ. 2014ರಲ್ಲಿ ಬಿಜೆಪಿ 27 ಕ್ಷೇತ್ರಗಳ ಪೈಕಿ 19 ಸ್ಥಾನಗಳನ್ನು ಪಡೆದಿತ್ತು. ಆದರೆ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಕೇವಲ 6 ಸ್ಥಾನಗಳನ್ನು ಪಡೆದಿತ್ತು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

         ಮುಂಬೈ ಕರ್ನಾಟಕ, ಹೈದರಾಬಾದ್- ಕರ್ನಾಟಕ, ಮಧ್ಯ ಕರ್ನಾಟಕ, ದಕ್ಷಿಣ ಕರ್ನಾಟಕ ಮತ್ತು ಕರಾವಳಿ ಕರ್ನಾಟಕ ಭಾಗಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ರಾಜ್ಯ ನಾಯಕರಿಗೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ. ಆದರೆ ಮುಂಬೈಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ, ಮುಂದಿನ ಎರಡು ದಿನಗಳಲ್ಲಿ ಕುಮಾರಸ್ವಾಮಿ ಸರ್ಕಾರ ಪತನವಾಗಲಿದೆ ಎಂದು ಮಹಾರಾಷ್ಟ್ರ ಸಚಿವ ರಾಮ್ ಶಿಂಧೆ ಹೇಳಿಕೆ ನೀಡುವ ಮೂಲಕ ರಾಜ್ಯ ಸಮ್ಮಿಶ್ರ ಸರ್ಕಾರದ ಎದೆಬಡಿತವನ್ನು ಹೆಚ್ಚಿಸಿದ್ದಾರೆ. ಇದು ಮೈತ್ರಿ ಪಕ್ಷಗಳಲ್ಲಿ ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.

         ಇಬ್ಬರು ಪಕ್ಷೇತರ ಶಾಸಕರಾದ ಎಚ್. ನಾಗೇಶ್ ಮತ್ತು ಆರ್. ಶಂಕರ್ ಅವರು ಮೈತ್ರಿ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುವ ಕುರಿತ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ರಾಜ್ಯಪಾಲರನ್ನು ಉಲ್ಲೇಖಿಸಿ ಈ ಪತ್ರಗಳನ್ನು ಬರೆಯಲಾಗಿದೆ.

         ಲಾಭದಾಯಕ ಸಚಿವ ಸ್ಥಾನಗಳನ್ನು ಪಡೆಯಲು ನಡೆದ ಪೈಪೋಟಿಯ ಬಳಿಕ ಇದೀಗ ಜೆಡಿಎಸ್ ಮತ್ತು ಕಾಂಗ್ರೆಸ್ ನಲ್ಲಿ ಲೋಕಸಭೆಗೆ ಸೀಟು ಹಂಚಿಕೆ ಬಿಕ್ಕಟ್ಟು ತಲೆದೋರಿದೆ. ಇದು ಉಭಯ ಪಕ್ಷಗಳ ನಡುವೆ ಬಹಿರಂಗ ಹೇಳಿಕೆಗಳಿಗೆ ಕಾರಣವಾಗಿದೆ. ತಮ್ಮನ್ನು ಕ್ಲರ್ಕ್ ಮಾದರಿ ನೋಡಲಾಗುತ್ತಿದೆ ಎಂದು ಈ ಹಿಂದೆ ಮುಖ್ಯಮಂತ್ರಿಯವರು ಬಹಿರಂಗವಾಗಿಯೇ ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link