ನವದೆಹಲಿ:
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಇಂದು NEET ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತ ಅರ್ಜಿಗಳ ವಿಚಾರಣ ನಡೆಸಲಿದೆ.
ಎನ್ಇಇಟಿ-ಯುಜಿ (NEET-UG) ಪರೀಕ್ಷೆ ಅಕ್ರಮದ ಸಂಬಂಧ 35 ಕ್ಕೂ ಹೆಚ್ಚು ಅರ್ಜಿದಾರರು ಅರ್ಜಿ ಸಲ್ಲಿಸಿದ್ದು, ಈ ಪೈಕಿ ಕೆಲವರು ಪರೀಕ್ಷೆಯ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದರೆ, ಮತ್ತೆ ಕೆಲವರು ಪರೀಕ್ಷೆಯನ್ನು ಪುನಃ ನಡೆಸಲು ಆದೇಶ ನೀಡಬೇಕೆಂದು ಮನವಿ ಮಾಡಿದ್ದಾರೆ.
ವಿವಿಧ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ ಗುಂಪುಗಳು ಮತ್ತು ವೈಯಕ್ತಿಕವಾಗಿ ವಿದ್ಯಾರ್ಥಿಗಳು ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ. ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದ 20 ವಿದ್ಯಾರ್ಥಿಗಳ ಗುಂಪು, NEET-UG ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದೆ ಮತ್ತು ಸಿಬಿಐ ಅಥವಾ ಯಾವುದೇ ಸ್ವತಂತ್ರ ಸಂಸ್ಥೆಯಿಂದ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆ ಅಕ್ರಮಗಳ ಆರೋಪದ ಬಗ್ಗೆ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಮನವಿ ಮಾಡಿದೆ.
ಮೇ 5 ರಂದು ನಡೆದ ಪರೀಕ್ಷೆಯನ್ನು ಎದುರಿಸಿದ ಲಕ್ಷಾಂತರ ಪ್ರಾಮಾಣಿಕ ಅಭ್ಯರ್ಥಿಗಳ ಹಿತಾಸಕ್ತಿಗೆ ಧಕ್ಕೆಯಾಗುವುದರಿಂದ ನಡೆದಿರುವ ಪರೀಕ್ಷೆಗಳನ್ನು ರದ್ದುಗೊಳಿಸಬಾರದು ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಮೂಲಕ ತಿಳಿಸಿದೆ.