ಹೊಸ ಮರಳು ನೀತಿ

ಬೆಂಗಳೂರು:


ರಾಜ್ಯದಲ್ಲಿ ನೂತನ ಮರಳು ನೀತಿ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಮರಳು ಗಣಿಗಾರಿಕೆಗೆ ಅನುಮತಿ ನೀಡಲು ಗ್ರಾಮ ಪಂಚಾಯತ್‍ಗಳಿಗೆ ಅಧಿಕಾರ ನೀಡಲಾಗಿದೆ. ಪ್ರತಿ ಟನ್ ಮರಳಿಗೆ 300 ರೂಪಾಯಿ, ನದಿ ಮರಳಿಗೆ 700 ರೂಪಾಯಿ ದರ ನಿಗದಿ ಮಾಡಲಾಗಿದೆ. ಮಾರಾಟದ ಶೇಕಡ 25ರಷ್ಟು ಸಂಪನ್ಮೂಲವನ್ನು ಗ್ರಾಮ ಪಂಚಾಯತ್‍ಗಳಿಗೆ ನೀಡಲಾಗುವುದು. ಕರಾವಳಿ ಪ್ರದೇಶದಲ್ಲೂ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಿದ್ದು, ಇದಕ್ಕೆ ಗ್ರಾಮ ಪಂಚಾಯತ್‍ಗಳಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸ್ಥಗಿತಗೊಂಡಿರುವ ಗಣಿಗಾರಿಕೆಗೆ ಅನುಮತಿ ನೀಡಲು ಸಂಪುಟ ನಿರ್ಧರಿಸಿದೆ. ನೇಕಾರ ಸಮುದಾಯದ ಸಂಕಷ್ಟಗಳಿಗೆ ಸ್ಪಂದಿಸಲು 376 ಕೋಟಿ ರೂಪಾಯಿ ಮೊತ್ತದ ವಿಶೇಷ ಪ್ಯಾಕೇಜ್‍ಗೆ ಅನುಮತಿ ನೀಡಲಾಗಿದ್ದು, ಮುಂಬೈ-ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ಹೊಸದಾಗಿ ನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡದಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಸಿರಗುಪ್ಪದಲ್ಲಿ ವೇದಾವತಿ ನದಿಗೆ ಸೇತುವೆ ನಿರ್ಮಾಣ ಮಾಡುವ 30 ಕೋಟಿ ರೂಪಾಯಿ ಮೊತ್ತದ ಪ್ರಸ್ತಾವನೆ ಹಾಗೂ ರಾಜ್ಯ ರಸ್ತೆ ಅಭಿವೃದ್ಧಿ ಪ್ರಾಧಿಕಾರಕ್ಕೆ 825 ಕೋಟಿ ರೂಪಾಯಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.

ಬೆಳಗಾವಿಯಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ನಡೆಸುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ದಿನಾಂಕ ನಿಗದಿ ಮಾಡಲಾಗುವುದು. ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಪ್ರತ್ಯೇಕ ಹಾಲು ಒಕ್ಕೂಟ ರಚನೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link