ಬೆಂಗಳೂರು
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯ ಸಮಯದಲ್ಲಿಯೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ಮಾರ್ಚ್ ತಿಂಗಳಿನಲ್ಲಿ ನಿಧನ ಹೊಂದಿದ್ದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಭಾನುವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಬಿ. ಎನ್. ಚಂದ್ರಪ್ಪ ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಂದ್ರಪ್ಪ ನೇಮಕ ಮಾಡಿದ್ದು, ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.