ಬೆಂಗಳೂರು:
ಸರ್ಕಾರಕ್ಕೆ ವಿದ್ಯಾರ್ಥಿಗಳ ಭವಿಷ್ಯ ಮುಖ್ಯವಲ್ಲ, ಜಾತಿ ಗಣತಿ ಮುಖ್ಯ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಮೀಕ್ಷೆಯು ನಿಜವಾಗಿಯೂ ಸಾಮಾಜಿಕ ಕಲ್ಯಾಣದ ಬಗ್ಗೆ ಆಗಿದ್ದರೆ, ಬೇಸಿಗೆ ರಜೆಯ ಸಮಯದಲ್ಲಿ ಶಿಕ್ಷಣವನ್ನು ಅಡ್ಡಿಪಡಿಸದೆ ವ್ಯವಸ್ಥಿತವಾಗಿ ನಡೆಸಬಹುದಿತ್ತು. ಆದರೆ ಸರ್ಕಾರದ ಈ ನಿಲುವನ್ನು ನಿಖಿಲ್ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
2 ಕೋಟಿ ಮನೆಗಳಲ್ಲಿ ವಾಸಿಸುವ 7 ಕೋಟಿ ಜನರನ್ನು ಕೇವಲ 15 ದಿನಗಳಲ್ಲಿ ಸಮೀಕ್ಷೆ ಮಾಡಲು ಸಾಧ್ಯವಿಲ್ಲ ಎಂಬುದು ಸಮೀಕ್ಷೆ ಪ್ರಾರಂಭವಾಗುವ ಮೊದಲೇ ಸ್ಪಷ್ಟವಾಗಿತ್ತು. ಆದರೆ ಪೂರ್ವ ತಯಾರಿ ಇಲ್ಲದೆ ಯಾರದೋ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ಮಾಡುತ್ತಿದೆ. ಜಾತಿಗಣತಿ ದಿನದಿಂದ ದಿನಕ್ಕೆ ಗೊಂದಲಮಯವಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರ ಸಮೀಕ್ಷೆಗಾಗಿ ಶಾಲಾ ಮಕ್ಕಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ವಿದ್ಯಾರ್ಥಿಗಳ ಭವಿಷ್ಯ ಮುಖ್ಯವಲ್ಲ. ಜಾತಿ ಗಣತಿ ಮುಖ್ಯ ಎಂಬುದು ಇದರಿಂದ ಸ್ಪಷ್ಟ ತಿಳಿಯುತ್ತೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರಿ ಶಾಲೆಗಳು ದೀಪಾವಳಿಯ ನಂತರವೇ ಮತ್ತೆ ತೆರೆಯುತ್ತವೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಒಂದು ತಿಂಗಳ ಕಾಲ ಶಾಲೆಗಳಿಂದ ದೂರವಿರುತ್ತಾರೆ, ಆದರೆ ಖಾಸಗಿ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಇದು ಲಕ್ಷಾಂತರ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಮತ್ತೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಾವು ಯಾರನ್ನೂ ವಿಭಜಿಸುವುದಿಲ್ಲ. ಈ ವಿಚಾರ ಆ ಸಮಾಜಕ್ಕೆ ಹಾಗೂ ಜನರಿಗೆ ಬಿಡುತ್ತೇವೆ. ಈ ಸಮುದಾಯದ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಮಾತ್ರ ಅವರ ಸಮುದಾಯದ ಗುರುತು ಕೇಳುತ್ತಿದ್ದೇವೆ. ಇದರ ಹೊರತಾಗಿ ನಮ್ಮ ಮುಂದೆ ಬೇರೆ ಯಾವುದೇ ಆಲೋಚನೆಗಳಿಲ್ಲ. ಅವುಗಳ ಬಗ್ಗೆ ನಾವು ಚಿಂತಿಸುವುದಿಲ್ಲʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಲಿಂಗಾಯತ ಧರ್ಮದ ವಿಚಾರವಾಗಿ ಕಾಂಗ್ರೆಸ್‌ನಲ್ಲೇ ಭಿನ್ನಮತವಿದೆ ಎಂದು ಮಾಧ್ಯಮಗಳು ಎಂದು ಕೇಳಿದ ಪ್ರಶ್ನೆಗೆ ವಿಧಾನಸೌಧದಲ್ಲಿ ಮಂಗಳವಾರ ಡಿಸಿಎಂ ಪ್ರತಿಕ್ರಿಯಿಸಿದ್ದಾರೆ.








