ಗುಬ್ಬಿ:
ತಾಲ್ಲೂಕಿನ ನಿಟ್ಟೂರು ಶ್ರೀ ವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭವಾಗುತ್ತಿರುವ 70 ಬೆಡ್‍ಗಳ ಕೋವಿಡ್ ಕೇರ್ ಸೆಂಟರ್‍ನ ಸಿದ್ದತೆಗಳನ್ನು ಪರಿಶೀಲಿಸಿದ ಶಾಸಕ ಎಸ್.ಆರ್.ಶ್ರೀನಿವಾಸ್ ಸಂಬಂಧಿಸಿದ ಅಧಿಕಾರಿಗಳು ತ್ವರಿತವಾಗಿ ರೋಗಿಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಪೂರ್ಣಗೊಳಿಸಿ ರೋಗಿಗಳನ್ನು ದಾಖಲು ಮಾಡಿಕೊಳ್ಳುವಂತೆ ತಿಳಿಸಿದರು.
ಇತ್ತೀಚೆಗೆ ತಾಲ್ಲೂಕಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ ಪ್ರಮಾಣ ಸಲ್ಪ ಕಡಿಮೆಯಾಗುತ್ತಿದ್ದು ಇನ್ನೂ 15 ದಿನಗಳಲ್ಲಿ ಕಡಿಮೆಯಾಗುವ ಲಕ್ಷಣ ಕಂಡು ಬರುತ್ತಿದೆ. ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡುತ್ತಿರುವುದರಿಂದ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ. ಈಗಾಗಲೇ ತಾಲ್ಲೂಕಿನ 4 ಭಾಗದಲ್ಲಿ ಕೋವಿಡ್ ಕೇರ್ ಸೆಂಟರನ್ನು ಪ್ರಾರಂಭಮಾಡಿದ್ದು, ಸುಮಾರು 170 ಮಂದಿ ಸೋಂಕಿತರು ಉಳಿದುಕೊಳ್ಳಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ತಹಶೀಲ್ದಾರ್ ಡಾ.ಪ್ರದೀಪ್‍ಕುಮಾರ್ ಹಿರೇಮಠ್ ಮಾತನಾಡಿ ಈಗಾಗಲೇ ತಾಲ್ಲೂಕಿನ ಗುಬ್ಬಿ ಪಟ್ಟಣ, ಕಡಬ, ಹೇರೂರು ಮತ್ತು ನಿಟ್ಟೂರಿನಲ್ಲಿ ಕೋವಿಡ್‍ಕೇರ್ ಸೆಂಟರ್‍ಗಳನ್ನು ಪ್ರಾರಂಭಿಸಲಾಗಿದ್ದು ಆಯಾ ಭಾಗದ ಗ್ರಾಮಗಳಲ್ಲಿ ಪಾಸಿಟೀವ್ ಬಂದವರು ಕೋವಿಡ್ ಕೇರ್ ಸೆಂಟರ್‍ಗೆ ದಾಖಲಾಗಿ ಅಗತ್ಯವಿರುವ ಚಿಕಿತ್ಸೆಗಳನ್ನು ಪಡೆದುಕೊಂಡು ಶೀಘ್ರವಾಗಿ ಗುಣಮುಖರಾಗುವಂತೆ ಕರೆನೀಡಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿಂದುಮಾಧವ ಮಾತನಾಡಿ ತಾಲ್ಲೂಕಿನಾದ್ಯಂತ ಕೋವಿಡ್ ಹರಡದಂತೆ ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಾಲ್ಲೂಕಿನಲ್ಲಿ ಸಾವಿನ ಸಂಖ್ಯೆ ಕಡಿಮೆ ಇದೆ ಅಲ್ಲದೆ ಇತ್ತಿಚೇಗೆ ಸೋಂಕಿತರ ಸಂಖ್ಯೆಯು ಕಡಿಮೆಯಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರಭಾರ ಉಪವಿಭಾಗಾಧಿಕಾರಿ ಹಾಗೂ ತಾಲ್ಲೂಕು ಕೋವಿಡ್ ನೋಡಲ್ ಅಧಿಕಾರಿ ಸ್ಟೆಲ್ಲಾ ವರ್ಗಿಸ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಪುರುಷೋತ್ತಮ, ಕಂದಾಯ ನಿರೀಕ್ಷಕ ಕೆ.ವಿ.ನಾರಾಯಣ್, ಅಭಿವೃದ್ಧಿ ಅಧಿಕಾರಿ ನಾಗರಾಜು ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ