ಪ್ರಜ್ವಲ್‌ ಗಾಗಿ ವಿಮಾನ ನಿಲ್ದಾಣದಲ್ಲಿಯೇ ಬೀಡು ಬಿಟ್ಟ ಅಧಿಕಾರಿಗಳು ….!

ಬೆಂಗಳೂರು

     ಮಹಿಳೆ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್”ಡಿ.ರೇವಣ್ಣ ಅವರು ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಯಾವುದೇ ಸಮಯದಲ್ಲಿ ವಿದೇಶದಿಂದ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆಗಳಿದ್ದು, ಪ್ರಜ್ವಲ್ ರಾಜ್ಯಕ್ಕೆ ಕಾಲಿಡುತ್ತಿದ್ದಂತೆಯೇ ಅವರ ಬಂಧನಕ್ಕೆ ಎಸ್‌ಐಟಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಇದರಂತೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಠಿಕಾಣಿ ಹೂಡಿದೆ.

    ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಅಪಹರಿಸಿದ್ದ ಆರೋಪದಡಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಶನಿವಾರ ಬಂಧಿಸಿದ್ದರು. ನಂತರ ಭಾನುವಾರ ಮಧ್ಯಾಹ್ನದವರೆಗೂ ಸತತ ವಿಚಾರಣೆ ನಡೆಸಿದ ಅಧಿಕಾರಿಗಳು, ಸಂಜೆ ಬೆಂಗಳೂರಿನ ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದರು.

    ಎಸ್‌ಐಟಿ ಪರ ವಕೀಲರು, ಹೆಚ್ಚಿನ ವಿಚಾರಣೆಗಾಗಿ ರೇವಣ್ಣ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರಲ್ಲಿ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ, ಆರೋಪಿಯನ್ನು ಮೇ 8ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. 

    ತಂದೆ ಹೆಚ್.ಡಿ.ರೇವಣ್ಣ ಅವರ ಬಂಧನವಾಗಿರುವ ಹಿನ್ನೆಲೆಯಲ್ಲಿ ವಕೀಲರ ಸಲಹೆ ಮೇರೆಗೆ ಪ್ರಜ್ವಲ್ ವಿದೇಶದಿಂದ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆಯಿದೆ. ಶನಿವಾರ ತಂದೆ ರೇವಣ್ಣ ಬಂಧನಕ್ಕೆ ಒಳಗಾಗುವ ಮುನ್ನ ಪ್ರಜ್ವಲ್ ಕರೆ ಮಾಡಿ ಕೆಲ ಕಾಲ ಮಾತನಾಡಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್ ವಿದೇಶದಿಂದ ಬೆಂಗಳೂರಿಗೆ ವಾಪಸ್ ಆಗಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

    ರೇವಣ್ಣ ಅವರ ಮನೆ ಕೆಲಸದ ಮಹಿಳೆ ನೀಡಿದ ದೂರಿನ ಅನ್ವಯ ಹಾಸನದ ಹೊಳೆ ನರಸೀಪುರದ ಟೌನ್‌ ಪೊಲೀಸ್‌ ಠಾಣೆಯಲ್ಲಿ ರೇವಣ್ಣ ಮತ್ತು ಪ್ರಜ್ವಲ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಪ್ರಕರಣದಲ್ಲಿ ಎಚ್‌ ಡಿ ರೇವಣ್ಣ ಮೊದಲ ಆರೋಪಿಯಾಗಿದ್ದು, ಪ್ರಜ್ವಲ್‌ನನ್ನು ಎರಡನೇ ಆರೋಪಿಯನ್ನಾಗಿಸಲಾಗಿದೆ.

    ಏಪ್ರಿಲ್‌ 28ರಂದು ದಾಖಲಾಗಿರುವ ಎಫ್‌ಐಆರ್‌ನಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಾದ 354(ಎ), 354(ಡಿ), 506, 509 ಅಡಿ ಪ್ರಕರಣ ದಾಖಲಿಸಲಾಗಿದೆ. ಇದರ ತನಿಖೆಯನ್ನು ಹಿರಿಯ ಐಪಿಎಸ್‌ ಅಧಿಕಾರಿ ಬಿ ಕೆ ಸಿಂಗ್‌ ನೇತೃತ್ವದ ವಿಶೇಷ ತನಿಖಾ ತಂಡ ಆರಂಭಿಸಿದೆ..

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap