ಅಧಿಕಾರಿಗಳ ವರ್ಗಾವಣೆ : ಸರ್ಕಾರದಿಂದ ಬಂತು ಮಹತ್ವದ ಆದೇಶ…..!

ಬೆಂಗಳೂರು:

   ಕಳೆದ ಐದು ವರ್ಷಗಳಿಂದ ಒಂದೇ ಸ್ಥಳದಲ್ಲಿ ಮತ್ತು ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಇಲಾಖೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಸರ್ಕಾರ ಸೂಚನೆ ನೀಡಿದೆ.ಅಂತಹ ಅಧಿಕಾರಿಗಳು ಮತ್ತು ಸಿಬ್ಬಂದಿ ಪಟ್ಟಿ ನೀಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯ ಸುತ್ತೋಲೆ ಹೊರಡಿಸಿದೆ.

   ಐದು ವರ್ಷಗಳಿಂದ ಒಂದೇ ಸ್ಥಳದಲ್ಲಿ ಮತ್ತು ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಸಾರ್ವಜನಿಕ ದೂರುಗಳನ್ನು ಹೊಂದಿರುವ ಅಧಿಕಾರಿಗಳ ಪಟ್ಟಿಯನ್ನು ಸಲ್ಲಿಸಲು ಎಲ್ಲಾ ಡಿಸಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

   ಒಂದೇ ಸ್ಥಳದಲ್ಲಿ ದೀರ್ಘ ಕಾಲದಿಂದ ಸೇವೆ ಸಲ್ಲಿಸುತ್ತಿರುವ ಕೆಲ ಅಧಿಕಾರಿಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿವೆ ಎಂದು ತಿಳಿಸಿದರು. ಈ ಸೂಚನೆಯಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಕಚೇರಿಯಲ್ಲಿ ಸಿಬ್ಬಂದಿಯ ಕಾರ್ಯಕ್ಷಮತೆ ಹೆಚ್ಚಿಸಲು ಮತ್ತು ಶಿಸ್ತು ಪಾಲನೆ ಅನುಷ್ಠಾನಕ್ಕೆ ತರಲು ಶಿಸ್ತುಕ್ರಮ ತೆಗೆದುಕೊಳ್ಳಿ ಎಂದೂ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

   ಹಲವು ನೌಕರರು ಮತ್ತು ಅಧಿಕಾರಿಗಳು ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದು, ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ. ಅಂತಹ ಅಧಿಕಾರಿಗಳ ವಿರುದ್ಧವೂ ದೂರುಗಳು ಬಂದಿವೆ. ಐದು ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಅಂತಹ ಅಧಿಕಾರಿಗಳ ಪಟ್ಟಿಯನ್ನು ಡಿಸಿಗಳು ಸಿದ್ಧಪಡಿಸಬೇಕು ಮತ್ತು ಅಂತಹ ಅಧಿಕಾರಿಗಳ ವಿರುದ್ಧ ಯಾವುದೇ ದೂರುಗಳಿದ್ದಲ್ಲಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಹೇಳಿದ್ದಾರೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ