ಮಹತ್ವದ ನಿರ್ಣಯ ಅಂಗೀಕರಿಸಿದ ಒಮರ್ ಕ್ಯಾಬಿನೆಟ್….!

ಶ್ರೀನಗರ: 

   ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿದೆ. ಈ ಮೂಲಕ ಒಮರ್ ಅಬ್ದುಲ್ಲಾ ತಮ್ಮ ಮಾತು ಉಳಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತವಾಗಿ ಮಾಹಿತಿ ನೀಡಿಲ್ಲ.

   ಸಿಎಂ ಒಮರ್ ಅಬ್ದುಲ್ಲಾ ನೇತೃತ್ವದ ಸಚಿವ ಸಂಪುಟ ಸಭೆ ಗುರುವಾರ ಸಿವಿಲ್ ಸೆಕ್ರೆಟರಿಯೇಟ್‌ನಲ್ಲಿ ನಡೆಯಿತು. ಡಿಸಿಎಂ ಸುರೀಂದರ್ ಚೌಧರಿ, ಸಚಿವರಾದ ಸಕೀನಾ ಇಟ್ಟೂ, ಜಾವೇದ್ ದಾರ್, ಜಾವೇದ್ ರಾಣಾ ಮತ್ತು ಸತೀಶ್ ಶರ್ಮಾ ಅವರು ಚುನಾಯಿತ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಭಾಗವಹಿಸಿದ್ದರು. ಮುಖ್ಯ ಕಾರ್ಯದರ್ಶಿ ಅಟಲ್ ದುಲೂ ಕೂಡ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು.

   ಮೊದಲ ಕ್ಯಾಬಿನೆಟ್ ಸಭೆಯು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವ ಬಗ್ಗೆ ನಿರ್ಣಯ ಅಂಗೀಕರಿಸಿತು ಮತ್ತು ಕಣಿವೆಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನವನ್ನು ಪುನಃಸ್ಥಾಪಿಸುವಂತೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿತು ಎಂದು ಮೂಲಗಳು ತಿಳಿಸಿವೆ.

   ಆಗಸ್ಟ್ 5, 2019 ರಂದು, ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಮುಂದಿನ ಕೆಲವು ದಿನಗಳಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಲಿದ್ದಾರೆ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವಂತೆ ಒತ್ತಾಯಿಸಿ ಸಂಪುಟ ಸಭೆ ಅಂಗೀಕರಿಸಿದ ನಿರ್ಣಯದ ಕರಡನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

   ಅಧಿಕಾರ ಸ್ವೀಕರಿಸುವ ಮೊದಲು, ಒಮರ್ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವ ಬಗ್ಗೆ ನಿರ್ಣಯ ಅಂಗೀಕರಿಸಬೇಕು ಮತ್ತು ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಹೇಳಿದ್ದರು. ಅಲ್ಲದೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಆರ್ಟಿಕಲ್ 370 ಮರುಸ್ಥಾಪನೆಯ ಬಗ್ಗೆಯೂ ನಿರ್ಣಯ ಅಂಗೀಕರಿಸುತ್ತದೆ ಎಂದು ವಾಗ್ದಾನ ಮಾಡಿದ್ದಾರೆ.

Recent Articles

spot_img

Related Stories

Share via
Copy link
Powered by Social Snap