ನವದೆಹಲಿ:
ಕೇಂದ್ರ ಸರ್ಕಾರದ 2024-25ನೇ ಆರ್ಥಿಕ ವರ್ಷದ ಬಜೆಟ್ ಮಂಡನೆಯಾಗಿದೆ. ಬಜೆಟ್ ನಲ್ಲಿ ಮೋದಿ 3.0 ಸರ್ಕಾರ ಕೇವಲ ಬಿಹಾರ ಮತ್ತು ಆಂಧ್ರ ಪ್ರದೇಶಕ್ಕೆ ಸಿಂಹಪಾಲು ನೀಡಿದೆ,
ಬೇರೆಲ್ಲಾ ರಾಜ್ಯಗಳನ್ನು ಅದರಲ್ಲೂ ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳನ್ನು ಕಡೆಗಣಿಸಿದೆ ಎಂದು ಆರೋಪಿಸುತ್ತಿವೆ.ಮತ್ತು ಇತರ ಪರಿಣಾಮ ಜುಲೈ 27 ರಂದು ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ವಿರೋಧ ಪಕ್ಷದ ರಾಜ್ಯಗಳ ಮುಖ್ಯಮಂತ್ರಿಗಳು ಒಕ್ಕೊರಲಿನಿಂದ ನಿರ್ಧರಿಸಿದ್ದಾರೆ.
ನಿನ್ನೆ ಸಂಜೆ ಇಂಡಿಯಾ ಬ್ಲಾಕ್ ಮೈತ್ರಿಕೂಟದ ಸಭೆ ದೆಹಲಿಯಲ್ಲಿ ನಡೆದಿತ್ತು. ಅದರಲ್ಲಿ ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಟಿಎಂಸಿ ನಾಯಕರಾದ ಡೆರೆಕ್ ಒಬ್ರಿಯನ್, ಕಲ್ಯಾಣ್ ಬ್ಯಾನರ್ಜಿ, ಆಪ್ ನಾಯಕ ಸಂಜಯ್ ಸಿಂಗ್, ಸಿಪಿಐ ನಾಯಕ ಪಿ ಸಂತೋಷ್ ಕುಮಾರ್, ಸಿಪಿಎಂನ ಕೆ ರಾಧಾಕೃಷ್ಣನ್ ಹಾಗೂ ಇತರರು ಉಪಸ್ಥಿತರಿದ್ದರು.
ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರೊಂದಿಗೆ ಸಮಾಲೋಚಿಸಿದ ನಂತರ ಟಿಎಂಸಿ ಈ ವಿಷಯದ ಬಗ್ಗೆ ಅಂತಿಮ ನಿರ್ಧಾರವನ್ನು ತಿಳಿಸುತ್ತದೆ. ಸಭೆಗೆ ಮುಂಚೆಯೇ, ಈ ಸಭೆ ಆರಂಭಕ್ಕೆ ಮೊದಲೇ ಡಿಎಂಕೆ ಮುಖ್ಯಸ್ಥ ಮತ್ತು ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಅವರು ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಪ್ರಕಟಿಸಿದ್ದರು.
ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಪ್ರಕಟಿಸಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕಾಂಗ್ರಪೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸಲಿದ್ದಾರೆ ಎಂದು ಹೇಳಿದ್ದಾರೆ.
