ಬೆಂಗಳೂರು:
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಒಟ್ಟು ಮೂರು ಮಸೂದೆಗಳಿಗೆ ಸಹಿ ಹಾಕದೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರಕ್ಕೆ ವಾಪಸ್ ಕಳಿಸಿದ್ದಾರೆ. ಈ ತಿದ್ದುಪಡಿಯು ದಾರಿ ತಪ್ಪಿಸುವಂತಿದೆ. ಬದಲಾವಣೆ ತರುವ ಉದ್ದೇಶಕ್ಕಿಂತಲೂ ಅಧಿಕಾರ ಕಿತ್ತುಕೊಳ್ಳುವ ಯತ್ನವಾಗಿದೆ ಎಂದಿದ್ದಾರೆ.
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ಈ ಮಸೂದೆ ಪ್ರಕಾರ ವಿಶ್ವವಿದ್ಯಾಲಯಗಳಿಗೆ ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಲಿದ್ದಾರೆ. ವಿಶ್ವವಿದ್ಯಾಲಯದ ಎಲ್ಲ ನೇಮಕಾತಿ, ಆಡಳಿತಾತ್ಮಕ ಅಧಿಕಾರ ಮುಖ್ಯಮಂತ್ರಿಗಳಿಗೆ ಇರಲಿದೆ. ಈ ಮೂಲಕ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲಾಗಿತ್ತು.
ಇದನ್ನು ವಾಪಸ್ ಕಳಿಸಿರುವ ರಾಜ್ಯಪಾಲರು, ಈ ತಿದ್ದುಪಡಿ ದಾರಿ ತಪ್ಪಿಸುವಂತಿದೆ ಎಂದು ಟಿಪ್ಪಣಿ ಬರೆದಿದ್ದಾರೆ. ಅವರು ವಾಪಸ್ ಕಳುಹಿಸಿದ ಇತರ ಎರಡು ಮಸೂದೆಗಳೆಂದರೆ ಮೈಸೂರು ಪ್ರಾಧಿಕಾರ ಅಭಿವೃದ್ಧಿ ಮಸೂದೆ- 2024 ಮತ್ತು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ಮಸೂದೆ-2024.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ತಡೆಗಟ್ಟುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ಹಲವು ಸ್ಪಷ್ಟನೆ ಕೇಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದರು. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ಐದು ಲಕ್ಷ ದಂಡ ಹೇಗೆ ಹಾಕುತ್ತೀರಾ ಎಂದು ರಾಜ್ಯಪಾಲರು ಸರ್ಕಾರವನ್ನು ಪ್ರಶ್ನೆ ಮಾಡಿದ್ದರು.