ದಿಂಡೋರಿ :
ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ಕನಿಷ್ಠ 14 ಮಂದಿ ಮೃತಪಟ್ಟು, 20 ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳು ಶಹಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಸುಕಿನ ಜಾವ ದುರ್ಘಟನೆ ನಡೆದಿದೆ. ಸಂತ್ರಸ್ತರು ದೇವ ಭಾರೈ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದಾಗ ಘಟನೆ ಸಂಭವಿಸಿದೆ.ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ಬಿಚಿಯಾ-ಬರ್ಜಾರ್ ಗ್ರಾಮದಲ್ಲಿ ಪಿಕಪ್ ವಾಹನ ನಿಯಂತ್ರಣ ತಪ್ಪಿ 25 ಅಡಿ ಆಳದ ಹೊಲಕ್ಕೆ ಉರುಳಿ ಬಿದ್ದಿದೆ. ಅಪಘಾತದ ಸಮಯದಲ್ಲಿ, ವಾಹನದಲ್ಲಿದ್ದ ಸುಮಾರು 35 ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದರು.
ಘಟನೆಯ ನಂತರ, ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಶಹಾಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ, ಮೃತರನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಮುಖ್ಯಮಂತ್ರಿ ಸಂತಾಪ:
ವಾಹನ ಅಪಘಾತದಲ್ಲಿ ಜೀವ ಕಳೆದುಕೊಂಡವರ ಬಗ್ಗೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಡಾ ಮೋಹನ್ ಯಾದವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬದ ಸದಸ್ಯರಿಗೆ ಈ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಕೇಳಿಕೊಂಡಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಂಪುಟ ಸಚಿವೆ ಶ್ರೀಮತಿ. ಸಂಪತಿಯ ಉಯ್ಕೆ ಡಿಂಡೋರಿಗೆ ತೆರಳಿ ಪರಿಸ್ಥಿತಿ ಅವಲೋಕಿಸಲಿದ್ದಾರೆ.