ಬೆಂಗಳೂರಿಗೆ ಹೇಮಾವತಿ ಕೊಡಿ : ಮಾಜಿ ಪ್ರಧಾನಿ….!

ಬೆಂಗಳೂರು:

     ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ಬೆಂಗಳೂರಿನ ನೀರಿನ ಸಮಸ್ಯೆಗೆ ಸರ್ಕಾರವೇ ಕಾರಣ ಎಂದು ಆರೋಪಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು, ಹೇಮಾವತಿ ನದಿಯ ನೀರನ್ನು ರಾಜ್ಯ ರಾಜಧಾನಿಗೆ ಬಳಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

    ಜೆ.ಪಿ. ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನೀರಿನ ಅಭಾವ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ. ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ”ನೀರಿನ ಟ್ಯಾಂಕರ್‌ಗಳ ಬೆಲೆ ಗಗನಕ್ಕೇರುತ್ತಿದೆ. ಸರ್ಕಾರಕ್ಕೆ ಕಾವೇರಿ ನೀರು ಕೊಡಲು ಸಾಧ್ಯವಾಗದಿದ್ದರೆ ಹೇಮಾವತಿ ನದಿಯಿಂದ ನೀರು ತಂದು ಬೆಂಗಳೂರಿಗೆ ಕೊಡಲಿ. ಅವರೂ ನನ್ನ ಜನರೇ ಆಗಿದ್ದು, ಹಾಸನ, ತುಮಕೂರು ಮೊದಲಾದ ಗ್ರಾಮಗಳಿಗೆ ಹೇಮಾವತಿ ನೀರು ಪೂರೈಸಲಿ ಎಂದು ಹೇಳಿದರು.

    ಇದೇ ವೇಳೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಕರೆದು ಮಾತನಾಡಿರುವ ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಕಳೆದ ಹತ್ತು ತಿಂಗಳಲ್ಲಿ ಅವರು ಎಷ್ಟು ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದಾರ? 

   ಬೆಂಗಳೂರಿನ ಜನತೆ 15 ದಿನಕ್ಕೊಮ್ಮೆ ನೀರು ಪಡೆಯುತ್ತಿದ್ದು, ಕಾವೇರಿ ನೀರಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಜನರು ಸಂತೋಷವಾಗಿದ್ದಾರೆ ಎಂದು ಸರ್ಕಾರ ಭಾವಿಸಿದರೆ ಅದು ತಪ್ಪು. ರಾಜ್ಯದೆಲ್ಲೆಡೆ ನೀರಿನ ಸಮಸ್ಯೆ ಉಲ್ಬಣಿಸಿದೆ. ಎಲ್ಲ ಕಡೆ ಗ್ಯಾರಂಟಿ ಕೊಟ್ಟಿದ್ದೇವೆ, ಸಾಧನೆ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿಕೊಂಡು ಓಡಾಡುತ್ತಿದ್ದಾರೆ. ರಾಜ್ಯದಲ್ಲಿ 692 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಸಿದ್ದರಾಮಯ್ಯ ಸಾಧನೆಯ ಕಿರುನೋಟ ಎಂದು ವಾಗ್ದಾಳಿ ನಡೆಸಿದರು.

   ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಕಾವೇರಿ ನೀರಿಗಾಗಿ ಹೋರಾಟ ನಡೆಸಿ ಹೇಮಾವತಿ, ಕಬಿನಿ, ಹಾರಂಗಿ ಅಣೆಕಟ್ಟು ಕಟ್ಟಿಸಿದವನು ನಿಮ್ಮ ಮುಂದೆ ಕೂತಿದ್ದೇನೆ. ಹೇಮಾವತಿಯಲ್ಲಿ ನೀರಿದೆ. ಅಲ್ಲಿನ ಹಳ್ಳಿಗಳಿಗೂ ಆ ನೀರು ಕೊಡಿ, ಬೆಂಗಳೂರಿಗೂ ನೀರು ಕೊಡಿ. ಕೆ.ಆರ್.ಎಸ್‌ನಲ್ಲಿ 90 ಅಡಿಗೆ ಬಂದಿದೆ. ಹೇಮಾವತಿಯಲ್ಲಿ 23 ಟಿಎಂಸಿ ನೀರಿದೆ. ಜನರಿಗೆ ಕೊಡಲು ನಿಮಗೆ ಸಮಸ್ಯೆ ಏನು? ಜನರು ನೀರಿಗಾಗಿ ಕಣ್ಣೀರು ಹಾಕುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

   ಇದೇ ವೇಳೆ, ನರೇಂದ್ರ ಮೋದಿ ಪ್ರಧಾನಿಯಾಗಿ ಪುನರಾಯ್ಕೆಯಾದರೆ ಕಾವೇರಿ ವಿವಾದ ಸೇರಿದಂತೆ ಕರ್ನಾಟಕಕ್ಕೆ ಸಂಬಂಧಿಸಿದ ಹಲವಾರು ಬಾಕಿ ಇರುವ ಸಮಸ್ಯೆಗಳನ್ನು ಪರಿಹಾರಗೊಳ್ಳುವ ವಿಶ್ವಾಸವನ್ನು ದೇವೇಗೌಡ ಅವರು ವ್ಯಕ್ತಪಡಿಸಿದರು.

    ಬಳಿಕ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳ ಸಮೀಕ್ಷೆಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಬಳಸಿಕೊಳ್ಳುತ್ತಿರುವುದಕ್ಕೆ ಸರ್ಕಾರವನ್ನು ಟೀಕೆ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap