ನವದೆಹಲಿ:
ಅಕ್ರಮ ಭಾರತೀಯ ವಲಸಿಗರ ಗಡಿಪಾರು ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 12 ಮತ್ತು 13 ರಂದು ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದಾರೆ.ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಶುಕ್ರವಾರ ತಿಳಿಸಿದ್ದಾರೆ.
ಟ್ರಂಪ್ ಅವರು ಎರಡನೇ ಬಾರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೋದಿ ಅವರು ಮೊದಲ ಬಾರಿಗೆ ಅಮೆರಿಕಕ್ಕೆ ಭೇಟಿ ನೀಡುತ್ತಿದ್ದಾರೆ. ಗಮನಾರ್ಹ ವಿಚಾರವೆಂದರೆ, ಟ್ರಂಪ್ ಹೊಸದಾಗಿ ಅಧಿಕಾರ ವಹಿಸಿಕೊಂಡ ಮೂರು ವಾರಗಳ ಒಳಗೆ ಈ ಆಹ್ವಾನ ಬಂದಿದ್ದು, ಇದು ಭಾರತ-ಅಮೆರಿಕ ಪಾಲುದಾರಿಕೆಯ ಮಹತ್ವವನ್ನು ಒತ್ತಿಹೇಳುತ್ತದೆ. “ಟ್ರಂಪ್ ಅವರು ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ ನಂತರ ಅಮೆರಿಕಕ್ಕೆ ಭೇಟಿ ನೀಡುವ ಮೊದಲ ಕೆಲವು ವಿಶ್ವ ನಾಯಕರಲ್ಲಿ ಪ್ರಧಾನಿ ಮೋದಿ ಕೂಡ ಒಬ್ಬರು” ಎಂದು ಮಿಶ್ರಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅಮೆರಿಕ ಭೇಟಿಯ ಕಾರ್ಯಸೂಚಿ ಮತ್ತು ನಿಗದಿತ ಕಾರ್ಯಕ್ರಮಗಳ ಕುರಿತು ಹೆಚ್ಚಿನ ವಿವರಗಳನ್ನು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ.
![](https://prajapragathi.com/wp-content/uploads/2024/11/trump-modi.gif)