ಬೆಂಗಳೂರು:
ಲೋಕಸಭೆ ಚುನಾವಣೆಯಲ್ಲಿನ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ ಜೋಶಿ ಶುಕ್ರವಾರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ತನ್ನ ದುರಾಡಳಿತವನ್ನು ಮರೆಮಾಚಲು 81 ವರ್ಷದ ಮಾಜಿ ಸಿಎಂ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವ ಮೂಲಕ ಷಡ್ಯಂತ್ರ ನಡೆಸುತ್ತಿದೆ. ಇತ್ತೀಚೆಗಷ್ಟೇ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲು ಕಂಡಿದೆ. ಈ ಸೋಲನ್ನು ಒಪ್ಪಿಕೊಳ್ಳಲು ಸಾಧ್ಯವಾಗದೆ ಆಡಳಿತವನ್ನು ತನ್ನ ಇಚ್ಛೆಗೆ ತಕ್ಕಂತೆ ಬಳಸಿಕೊಳ್ಳುತ್ತಿದೆ ಎಂದು ಸಚಿವ ಜೋಶಿ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ.
ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ನಾಲ್ಕು ತಿಂಗಳ ಹಿಂದೆ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದಾಗ ದುರುದ್ದೇಶದಿಂದ ದೂರು ದಾಖಲಿಸಲಾಗಿದೆ ಎಂದು ಹೇಳಿದ್ದರು. ಆದರೆ, ಚುನಾವಣೆ ನಂತರ ಕಾಂಗ್ರೆಸ್ ನಾಯಕರು ಹೊಸ ನಾಟಕ ಆರಂಭಿಸಿದ್ದಾರೆ ಎಂದು ದೂರಿದರು.
ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದೂರು ದಾಖಲಿಸಿರುವ ಮಹಿಳೆ ವಿವಿಧ ಐಎಎಸ್, ಐಪಿಎಸ್ ಅಧಿಕಾರಿಗಳು ಮತ್ತು ರಾಜಕಾರಣಿಗಳ ವಿರುದ್ಧ 60ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ ಅವರೇ ಉಲ್ಲೇಖಿಸಿದ್ದಾರೆ. ಆದರೆ, ಈಗ ತಮ್ಮ ದುರಾಡಳಿತವನ್ನು ಮರೆಮಾಚುವ ಏಕೈಕ ಉದ್ದೇಶದಿಂದ ಯಡಿಯೂರಪ್ಪ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದರು.
ಯಡಿಯೂರಪ್ಪ ಅವರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದು ಸೇಡಿನ ರಾಜಕಾರಣ. ಈ ಕೃತ್ಯದಿಂದ ಅವರು ತಕ್ಕ ಪಾಠ ಕಲಿಯಲಿದ್ದಾರೆ ಎಂದು ಹೇಳಿದರು.