ಮುಂಬೈ:
ಏಪ್ರಿಲ್-ಮೇ ತಿಂಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದು ವಂಚಿತ್ ಬಹುಜನ ಅಘಾಡಿ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಅವರು ಬುಧವಾರ ಘೋಷಿಸಿದ್ದಾರೆ.
ಡಾ. ಬಿ ಆರ್ ಅಂಬೇಡ್ಕರ್ ಅವರ ಮೊಮ್ಮಗ, ಪ್ರಕಾಶ್ ಅಂಬೇಡ್ಕರ್ ಅವರು ಇಂದು ಮಹಾರಾಷ್ಟ್ರದ ಕೆಲವು ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.
ಕಾಂಗ್ರೆಸ್, ಎನ್ ಸಿಪಿ ಮತ್ತು ಶಿವಸೇನೆ ಒಳಗೊಂಡ ಎಂವಿಎ ಜೊತೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಮೈತ್ರಿ ಮಾತುಕತೆ ವಿಫಲವಾಗಿದೆ.
ಕಳೆದ ವಾರ, ಶಿವಸೇನೆ ಮತ್ತು ಎನ್‌ಸಿಪಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಪ್ರಕಾಶ್ ಅಂಬೇಡ್ಕರ್ ಅವರು ಮಹಾರಾಷ್ಟ್ರದ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಹೇಳಿದ್ದರು.
ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಮೇ 20 ರ ನಡುವೆ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.